ಮಡಿಕೇರಿ, ಡಿ. 10: ಗ್ರಾಮ ಪಂಚಾಯಿತಿ ಚುನಾವಣೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಚುನಾವಣೆ ಸಂಬಂಧ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ನಿಗಾವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗ್ರಾ.ಪಂ.ಚುನಾವಣೆ ಸಂಬಂಧ ಇದುವರೆಗೆ ಕೈಗೊಳ್ಳಲಾಗಿರುವ ಮತ್ತು ಮುಂದೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಮಾತನಾಡಿದರು. ರಾಜ್ಯದ ಉತ್ತರ ಭಾಗದ ಕೆಲವು ಜಿಲ್ಲೆಗಳಲ್ಲಿ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಹರಾಜು ಮೂಲಕ ಅಭ್ಯರ್ಥಿ ಆಯ್ಕೆ ಮಾಡುತ್ತಿರುವುದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದ್ದು, ಜಿಲ್ಲೆಯಲ್ಲಿಯೂ ಇಂತಹ ಪ್ರಕರಣಗಳು ಕಂಡುಬಂದಲ್ಲಿ ಕೂಡಲೇ ವರದಿ ಮಾಡಬೇಕು. ಈ ಬಗ್ಗೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವಂತೆ ಚುನಾವಣಾ ನೋಡಲ್ ಅಧಿಕಾರಿ ಗಳಿಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಮತಗಟ್ಟೆಗಳ ಸಿದ್ಧತೆ ಮತ್ತು ದುರಸ್ತಿ ಪೂರ್ಣಗೊಂಡಿರುವ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಅವರು ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಮತಗಟ್ಟೆ ಗಳಲ್ಲಿ ಹೆಚ್ಚಿನ ನಿಗಾವಹಿಸುವುದು, ಮತಗಟ್ಟೆ ಅಧಿಕಾರಿಗಳ ಪಟ್ಟಿ ಸಿದ್ಧಪಡಿಸುವುದು ಮತ್ತಿತರ ಬಗ್ಗೆ ಮಾಹಿತಿ ಪಡೆದರು.
ಮತದಾರರ ಪಟ್ಟಿ ಮುದ್ರಿಸಿಕೊಡುವುದು, ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಮತ್ತು ಮತ ಎಣಿಕೆ ಕೇಂದ್ರ ಗುರುತಿಸಿ ಜನದಟ್ಟಣೆ ಹೆಚ್ಚಾಗದಂತೆ ಕ್ರಮವಹಿಸುವುದು, ಕೋವಿಡ್-19 ಮಾರ್ಗಸೂಚಿ ಅನುಸರಿಸಬೇಕಿರುವುದರಿಂದ ಈ ಬಗ್ಗೆ ಎಚ್ಚರವಹಿಸುವುದು. ಭದ್ರತಾ ಕೊಠಡಿ ಸ್ಥಾಪಿಸುವುದು, ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೇವಾ ಮತದಾರರ ಮತ ಪತ್ರ ನೀಡುವುದು, ಈಗಾಗಲೇ ಸಂತೆ, ಜಾತ್ರೆ, ಮದ್ಯ ಮಾರಾಟ ನಿಷೇಧ ಸಂಬಂಧ ಆದೇಶ ಹೊರಡಿಸಲಾಗಿದೆ ಎಂದು ಅವರು ತಿಳಿಸಿದರು.