ಮಡಿಕೇರಿ, ಜ. ೩: ಕೇಂದ್ರ ಸಚಿವರಾದ ಡಿ.ವಿ. ಸದಾನಂದ ಗೌಡ ಅವರು ಇಂದು ಚಿತ್ರದುರ್ಗದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಸಂದರ್ಭ ದಿಢೀರ್ ಅಸ್ವಸ್ಥತೆಗೊಳಗಾದ ಘಟನೆ ನಡೆದಿದೆ. ಕೂಡಲೇ ಅವರನ್ನು ಅಂಗರಕ್ಷಕರು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ಚಿತ್ರದುರ್ಗಕ್ಕೆ ಬಂದಿದ್ದ ವೇಳೆ ಈ ಪ್ರಸಂಗ ನಡೆದಿದೆ. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಅವರನ್ನು ಝೀರೋ ಟ್ರಾಫಿಕ್ ಮೂಲಕ ಬೆಂಗಳೂರಿಗೆ ಕರೆದೊಯ್ಯಲಾಗಿದ್ದು, ಅಲ್ಲಿನ ಹೆಬ್ಬಾಳದ ಖಾಸಗಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವದಾಗಿ ಕುಟುಂಬದ ಮೂಲಗಳು ತಿಳಿಸಿವೆ.