ಮಡಿಕೇರಿ, ಜ. ೧೮: ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಯನ್ನು ಕೈಬಿಡುವಂತೆ ಆಗ್ರಹಿಸಿ ಜಿಲ್ಲಾ ಪ್ರಗತಿಪರ ಜನಾಂದೋಲನ ವೇದಿಕೆ ವತಿಯಿಂದ ತಾ. ೨೩ ರಂದು ಜಿಲ್ಲೆಯ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ವೇದಿಕೆಯ ಪ್ರಧಾನ ಸಂಚಾಲಕ ವಿ.ಪಿ. ಶಶಿಧರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕಾಂಗ್ರೆಸ್, ಜೆಡಿಎಸ್‌ನ ಸಮಾನ ಮನಸ್ಕರು ಸೇರಿದಂತೆ ಭೂಮಿ ಮತ್ತು ವಸತಿ ಹಕ್ಕು ಹೋರಾಟ ಸಮಿತಿ, ಹಸಿರು ಸೇನೆ, ರೈತಪರ ಸಂಘಟನೆಗಳು, ಸಮಾನ ಮನಸ್ಕರು ಒಗ್ಗೂಡಿ ರೈತಪರ ಹೋರಾಟದ ಬಗ್ಗೆ ರೂಪುರೇಷೆ ಬಗ್ಗೆ ಈಗಾಗಲೇ ಸಭೆ ನಡೆಸಲಾಗಿದೆ. ತಾ.೨೩ ರಂದು ಬೆಳಿಗ್ಗೆ ೧೧ ಗಂಟೆಗೆ ಕೇಂದ್ರ ಸರ್ಕಾರ ಕಾಯ್ದೆಗಳನ್ನು ಹಿಂಪಡೆಯುವAತೆ ಒತ್ತಾಯಿಸಿ ಪ್ರತಿಭಟಿಸಲು ನಿರ್ಧರಿಸಲಾಗಿದೆ. ಅಲ್ಲದೇ, ಜ. ೨೫ ರಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಯಲಿರುವ ಪ್ರತಿಭಟನೆಗೆ ಬೆಂಬಲ ಸೂಚಿಸುವುದರ ಜತೆಗೆ, ತಾ.೨೬ ರಂದು ಬೆಂಗಳೂರಿನಲ್ಲಿ ನಡೆಯಲಿ ರುವ ದೆಹಲಿ ಚಲೋ ಜಾಥಾಕ್ಕೆ ಚಾಲನೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಮಾರ್ಚ್ ತಿಂಗಳಲ್ಲಿ ‘ಮಡಿಕೇರಿ ಚಲೋ’ ಕಾರ್ಯಕ್ರಮವನ್ನು ನಡೆಸಲು ನಿರ್ಧರಿಸಲಾಗಿದ್ದು, ರೈತ ವಿರೋಧಿ ಕಾಯ್ದೆಯನ್ನು ಹಿಂಪಡೆಯುವವರೆಗೂ ರೈತರ ಹೋರಾಟಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ನಡೆಸಲಾಗು ವುದು. ಈ ಕಾರ್ಯಕ್ರಮಗಳ ಬಗ್ಗೆ ಜಿಲ್ಲೆಯ ಗ್ರಾಮಗಳಲ್ಲಿ ಸಭೆ ಸಮಾರಂಭ ಆಯೋಜಿಸುವುದರ ಮೂಲಕ ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕುಶಾಲನಗರ ಎಪಿಎಂಸಿ ನಿರ್ದೇಶಕ ಶಶಿಭೀಮಯ್ಯ, ಮಾಜಿ ಅಧ್ಯಕ್ಷ ಎಚ್.ಎ. ರಮೇಶ್, ಹಸಿರು ಸೇನೆ ತಾಲೂಕು ಅಧ್ಯಕ್ಷ ಎಸ್.ಎಚ್. ಜವರಪ್ಪ, ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಕ್ ಖಾನ್, ಭೂಮಿ ಮತ್ತು ವಸತಿ ಹಕ್ಕು ಹೋರಾಟ ಸಮಿತಿಯ ಪ್ರಮುಖ ಮೊಣ್ಣಪ್ಪ ಉಪಸ್ಥಿತರಿದ್ದರು.