ಸೋಮವಾರಪೇಟೆ, ಜ. ೨೨: ಸಮೀಪದ ಗೌಡಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೊರೊನಾ ಲಸಿಕೆ ಅಭಿಯಾನ ನಡೆಯಿತು.
ಕಾರ್ಯಕ್ರಮವನ್ನು ತಾಲೂಕು ಪಂಚಾಯಿತಿ ಸದಸ್ಯೆ ಕುಸುಮಾ ಅಶ್ವಥ್ ಉದ್ಘಾಟಿಸಿದರು. ಆಸ್ಪತ್ರೆಯ ಆರೋಗ್ಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರು ಸೇರಿದಂತೆ ೬೮ ಮಂದಿಗೆ ಲಸಿಕೆ ಹಾಕಲಾಯಿತು.
ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಇಂದೂಧರ್ ಮಾತನಾಡಿ, ಕೋವಿಡ್-೧೯ ಸೋಂಕು ಹರಡದಂತೆ ತಡೆಯಲು ಪ್ರತಿಯೊಬ್ಬರು ಎಚ್ಚರ ವಹಿಸಬೇಕು. ಕೊರೊನಾ ಲಸಿಕೆ ಅತ್ಯಂತ ಸುರಕ್ಷಿತವಾಗಿದ್ದು, ಮುಂದಿನ ದಿನಗಳಲ್ಲಿ ಯಾವುದೇ ಭಯವಿಲ್ಲದೆ ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಮಡಿಕೇರಿ ವೈದ್ಯಕೀಯ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ನರಸಿಂಹ, ಗೌಡಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಲಿಖಿತ ಉಪಸ್ಥಿತರಿದ್ದರು.