ಮಡಿಕೇರಿ, ಫೆ. ೫: ಕಾವೇರಿ ವಿದ್ಯಾ ಸಂಸ್ಥೆ ಭಾಗಮಂಡಲ ಹಾಗೂ ಆದಿ ಚುಂಚನಗಿರಿ ಮಹಾಸಂಸ್ಥಾನ ಮಠ ಹಾಸನ, ಕೊಡಗು ಇವರ ಸಂಯುಕ್ತಾಶ್ರಯದಲ್ಲಿ ತಾ. ೮ ರಂದು ಗುರುವಂದನೆ ಮತ್ತು ಸಮರ್ಪಣಾ ಸಮಾರಂಭ ಭಾಗಮಂಡಲದ ಕಾವೇರಿ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಿದ್ಯಾಸಂಸ್ಥೆಯ ಅಧ್ಯಕ್ಷ ಹೊಸೂರು ಸತೀಶ್ ಕುಮಾರ್ ತಿಳಿಸಿದರು.
ಅಂದು ಬೆಳಿಗ್ಗೆ ೧೧ ಗಂಟೆಗೆ ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ್ ಮಹಾಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಆಯೋಜಿಸಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಅಧ್ಯಕ್ಷ ಹೊಸೂರು ಸತೀಶ್ ಕುಮಾರ್ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಸತಿ ಸಚಿವ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ, ವಿಧಾನ ಪರಿಷರ್ ಸದಸ್ಯೆ ವೀಣಾ ಅಚ್ಚಯ್ಯ ಪಾಲ್ಗೊಳ್ಳಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ವಿದ್ಯಾಸಂಸ್ಥೆ ಮಠದ ಸುಪರ್ದಿಗೆ: ಭಾಗಮಂಡಲ ನಾಡಿನ ಮಕ್ಕಳಿಗೆ ಶಿಕ್ಷಣ ನೀಡುವ ಉದ್ದೇಶದಿಂದ ೧೯೫೯ರಲ್ಲಿ ವಿದ್ಯಾಸಂಸ್ಥೆಯನ್ನು ಆರಂಭಿಸಲಾಯಿತು. ನಂತರ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸಿ, ಹಣಕಾಸು ಪರಿಸ್ಥಿತಿ ಬಿಗಡಾಯಿಸಿತು. ಕಟ್ಟಡಗಳು ಶಿಥಿಲಾವಸ್ಥೆಗೆ ತಲುಪಿದ ಪರಿಣಾಮ ಇಂದು ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದ ಸುಪರ್ದಿಗೆ ವಹಿಸಲಾಗಿದೆ. ಇದು ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ದೃಷ್ಠಿಯಿಂದ ಇಂದಿನ ಅಗತ್ಯಕ್ಕೆ ಅನುಗುಣವಾಗಿ ಆಧುನಿಕ ಮತ್ತು ಉನ್ನತ ಶಿಕ್ಷಣ ನೀಡುವ ಉದ್ದೇಶದಿಂದ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದ ಸತೀಶ್ ಕುಮಾರ್, ಅಂದಿನ ಕಾರ್ಯಕ್ರಮಕ್ಕೆ ಉಪನ್ಯಾಸಕರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿಕೊಡಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಉಪಾಧ್ಯಕ್ಷ ಹ್ಯಾರಿಸ್, ಗೌರವ ಕಾರ್ಯದರ್ಶಿ ರವೀಂದ್ರ, ಹಿರಿಯ ನಿದೇರ್ಶಕ ನಂಜುAಡಪ್ಪ, ನಿರ್ದೇಶಕ ರವೀಂದ್ರ ಹೆಬ್ಬಾರ್, ಪ್ರಾಂಶುಪಾಲೆ ಜಾನಕಿ ಇದ್ದರು.