ವೀರಾಜಪೇಟೆ, ಫೆ. ೯: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ನೌಕರರ ಸಮ್ಮಿಲನ ಕಾರ್ಯಕ್ರಮವನ್ನು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹಯೋಗದಲ್ಲಿ ತಾ. ೧೩ ರಂದು ಕುಶಾಲನಗರದ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ವೀರಾಜಪೇಟೆ ತಾಲೂಕು ಅಧ್ಯಕ್ಷ ಬಿ.ಎಸ್. ಗುರುರಾಜ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಮತ್ತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಶಂಭುಲಿAಗ ಪಾಟೀಲ್ ಸೇರಿದಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಆಗಮಿಸಲಿದ್ದಾರೆ ಎಂದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಸುರೇಂದ್ರ ಮಾತನಾಡಿ, ಉಭಯ ಸಂಘಗಳ ರಾಜ್ಯಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಸೇರುವ ಸಮ್ಮಿಲನ ಕಾರ್ಯಕ್ರಮದಲ್ಲಿ ನೌಕರರ ಏಳಿಗೆಗಾಗಿ ಜ್ಯೋತಿ ಸಂಜೀವಿನಿ ಯೋಜನೆ, ವೈದ್ಯಕೀಯ ಬಿಲ್ಲಿನ ಮರು ಪಡೆಯುವಿಕೆ, ಹೊಸ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಮುಂದುವರೆಸುವುದು ಸೇರಿದಂತೆ ಇನ್ನು ಹಲವಾರು ವಿಷಯಗಳ ಬಗ್ಗೆ ಚರ್ಚಿಸಿ ಸರ್ಕಾರಕ್ಕೆ ಮನವಿ ನೀಡಲಾಗುವುದು ಎಂದು ಹೇಳಿದರು.

ಗೋಷ್ಠಿಯಲ್ಲಿ ಬಿ.ಟಿ. ದೇವರಾಜ್, ಖಜಾಂಚಿ ಎ.ಬಿ. ಲಿತಾ, ರಾಜ್ಯ ಪರಿಷತ್ ಸದಸ್ಯ ಪಿ.ವಿ. ವಿಶ್ವನಾಥ್, ಉಪಾಧ್ಯಕ್ಷ ಪದ್ಮಕುಮಾರ್, ಸಂಘಟನಾ ಕಾರ್ಯದರ್ಶಿ ಅಶ್ವಿನ್ ಕುಮಾರ್, ನಿರ್ದೇಶಕ ಎ.ವಿ. ಮಂಜುನಾಥ್, ಅಶ್ವತ್ ಉಪಸ್ಥಿತರಿದ್ದರು.