ಮಡಿಕೇರಿ, ಫೆ. ೧೦: ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ೨೦೨೦-೨೧ನೇ ಸಾಲಿನ ಕಾಲೇಜು ವಿದ್ಯಾರ್ಥಿ ವೇದಿಕೆ, ಸಾಂಸ್ಕೃತಿಕ ಕ್ರೀಡೆ, ಎನ್.ಎಸ್.ಎಸ್. ಮತ್ತಿತರ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಹಾಗೂ ಪ್ರಥಮ ಪದವಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ತಾ. ೧೨ ರಂದು ಬೆಳಿಗ್ಗೆ ೧೧ ಗಂಟೆಗೆ ಕಾಲೇಜು ಆವರಣದಲ್ಲಿ ನಡೆಯಲಿದೆ.

ಸಮಾರಂಭವನ್ನು ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಿ.ಜೆ. ಜವರಪ್ಪ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಕೆ.ಸಿ. ದಯಾನಂದ ಹಾಗೂ ಕುಶಾಲನಗರ ಪದವಿಪೂರ್ವ ಕಾಲೇಜಿನ ಚಿತ್ರಕಲಾ ಶಿಕ್ಷಕ ಉ.ರಾ. ನಾಗೇಶ್ ಉಪಸ್ಥಿತರಿರುವರು.

ವಿದ್ಯಾರ್ಥಿ ವೇದಿಕೆಯ ಪದಾಧಿಕಾರಿಗಳಾದ ಉಪಾಧ್ಯಕ್ಷೆ ಎನ್. ಶಾಲಿನಿ, ಕಾರ್ಯದರ್ಶಿ ಕೆ. ಕೀರ್ತನಾ, ಜಂಟಿ ಕಾರ್ಯದರ್ಶಿ ಕೆ.ಎಸ್. ತೇಜಸ್ವಿನಿ, ಸಾಂಸ್ಕೃತಿಕ ಕಾರ್ಯದರ್ಶಿ ಬಿ.ಆರ್. ಪೂಜಾ, ಕ್ರೀಡಾ ಕಾರ್ಯದರ್ಶಿ ಕೆ.ಎಲ್. ತುಂಗಾ ಹಾಗೂ ಎನ್.ಎಸ್.ಎಸ್. ನಾಯಕಿ ರಚನಾ ಪಾಲ್ಗೊಳ್ಳಲಿದ್ದಾರೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.