ಸಿದ್ದಾಪುರ, ಫೆ. ೨೨: ಇತ್ತೀಚೆಗೆ ಖಾಸಗಿ ಸಂಸ್ಥೆಯ ಕಾಫಿ ತೋಟಗಳಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ನಡೆಸಿದ ಪ್ರತಿಭಟನೆಗೆ ಕಾರ್ಮಿಕ ಇಲಾಖೆ ಮೂಲಕ ಸ್ಪಂದನ ದೊರೆತಿದೆ ಎಂದು ಸಿಐಟಿಯು ಸಂಘಟನೆಯ ಮುಖಂಡ ಮಹದೇವ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸಿದ್ದಾಪುರ ಸಮೀಪದ ಬಿಬಿಟಿಸಿ ಕಂಪೆನಿಗೆ ಸೇರಿದ ೮ ತೋಟಗಳ ಲೈನ್ ಮನೆಗಳಲ್ಲಿ ವಾಸ ಮಾಡಿಕೊಂಡಿರುವ ೪೦೦ ಅಧಿಕ ತೋಟ ಕಾರ್ಮಿಕರು ತಮ್ಮ ಲೈನ್ ಮನೆಗಳನ್ನು ದುರಸ್ತಿಪಡಿಸಿ ಕೊಡಬೇಕೆಂದು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ೪ ದಿನಗಳವರೆಗೆ ಕೆಲಸಗಳನ್ನು ಸ್ಥಗಿತಗೊಳಿಸಿ ಕಂಪೆನಿಗೆ ಸೇರಿದ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಕಾರ್ಮಿಕ ಇಲಾಖಾಧಿಕಾರಿಗಳು ಕಾರ್ಮಿಕರು ವಾಸಿಸುವ ಲೈನ್ ಮನೆಗಳನ್ನು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕಾರ್ಮಿಕರ ಲೈನ್ ಮನೆಗಳು ದುರಸ್ತಿ ಯಾಗಿರುವುದು ಇಲಾಖಾಧಿಕಾರಿಗಳ ಗಮನಕ್ಕೆ ಬಂದಿದೆ. ಅಲ್ಲದೇ ಇದೇ ಸಂದರ್ಭದಲ್ಲಿ ಈ ಹಿಂದೆ ತೋಟಗಳಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭಗಳಲ್ಲಿ ಕಾಡಾನೆ ದಾಳಿಗೆ ಸಿಲುಕಿ ಶಾಶ್ವತ ಅಂಗ ವೈಫಲ್ಯದಿಂದ ಬಳಲುತ್ತಿದ್ದ ೧೯ ಮಂದಿ ಕಾರ್ಮಿಕರ ಬಗ್ಗೆ ಕಾರ್ಮಿಕ ಇಲಾಖೆಗೆ ತಿಳಿದುಬಂದಿದ್ದು, ಈ ಬಗ್ಗೆ ಸಂಸ್ಥೆಯು ಯಾವುದೇ ರೀತಿಯಲ್ಲಿ ಸ್ಪಂದಿಸದಿರುವ ಬಗ್ಗೆ ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದರು ಎಂದು ಮಹದೇವ ಮಾಹಿತಿ ನೀಡಿದರು. ಕೂಡಲೇ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಕಾರ್ಮಿಕ ಇಲಾಖೆಯು ಸೂಚನೆ ನೀಡಿದೆ ಎಂದರು. ಸಿಐಟಿಯು ಮುಖಂಡ ಹೆಚ್.ಬಿ ರಮೇಶ್ ಇದ್ದರು.