ಮಾ. ೧ ರಿಂದ ಮೂರನೇ ಹಂತದಲ್ಲಿ ಕೋವಿಡ್ ಲಸಿಕೆ

ನವದೆಹಲಿ, ಫೆ. ೨೪: ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಹಾಗೂ ಎರಡನೇ ಹಂತದಲ್ಲಿ ಮುಂಚೂಣಿ ಕೊರೊನಾ ವಾರಿಯರ್ಸ್ಗೆ ಕೋವಿಡ್ ಲಸಿಕೆ ನೀಡಲಾಗಿದ್ದು, ಈಗ ಮೂರನೇ ಹಂತದಲ್ಲಿ ೬೦ ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಮತ್ತು ೪೫ ವರ್ಷಕ್ಕಿಂತ ಮೇಲ್ಪಟ್ಟ ಇತರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಮಾರ್ಚ್ ೧ ರಿಂದ ಉಚಿತವಾಗಿ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಮೂರನೇ ಹಂತದ ಕೋವಿಡ್ ಲಸಿಕೆ ಅಭಿಯಾನವನ್ನು ಘೋಷಿಸಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು, ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು. ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಾವಡೇಕರ್ ಅವರು, ಲಸಿಕೆಯನ್ನು ಸರ್ಕಾರಿ ಕೇಂದ್ರಗಳಲ್ಲಿ ಉಚಿತವಾಗಿ ನೀಡಲಾಗುತ್ತದೆ. ಖಾಸಗಿ ಆಸ್ಪತ್ರೆಗಳಲ್ಲಿ ಶುಲ್ಕ ಪಡೆದು ಲಸಿಕೆ ನೀಡುವುದಕ್ಕೆ ಅವಕಾಶ ನೀಡುವ ಬಗ್ಗೆ ನಂತರ ನಿರ್ಧರಿಸಲಾಗುವುದು ಎಂದರು. ದೇಶದಲ್ಲಿ ಜ ೧೬ ರಿಂದ ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿದ್ದು, ಫೆಬ್ರವರಿ ೩ ರಿಂದ ಎರಡನೇ ಹಂತದಲ್ಲಿ ಮುಂಚೂಣಿ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ ನೀಡಲಾಗಿದೆ.

ಪುದುಚೇರಿಯಲ್ಲಿ ರಾಷ್ಟçಪತಿ ಆಡಳಿತ ಜಾರಿ

ನವದೆಹಲಿ, ಫೆ. ೨೪: ಪುದುಚೇರಿಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ವಿಶ್ವಾಸ ಕಳೆದುಕೊಂಡು ಪತನವಾದ ನಂತರ ನೂತನ ಸರ್ಕಾರ ರಚನೆಗೆ ಬಿಜೆಪಿ ಸೇರಿದಂತೆ ಯಾವುದೇ ರಾಜಕೀಯ ಪಕ್ಷಗಳು ಮುಂದಾಗದ ಹಿನ್ನೆಲೆ ಕೇಂದ್ರಾಡಳಿತ ಪ್ರದೇಶದಲ್ಲಿ ರಾಷ್ಟçಪತಿ ಆಡಳಿತ ಜಾರಿಗೊಳಿಸಲಾಗಿದೆ. ಪುದುಚೇರಿಯಲ್ಲಿ ರಾಷ್ಟçಪತಿ ಆಡಳಿತ ಜಾರಿಗೊಳಿಸುವ ಪ್ರಸ್ತಾಪಕ್ಕೆ ಬುಧವಾರ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು, ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ಅವರು ರಾಜೀನಾಮೆ ನೀಡಿದ ನಂತರ ಯಾವುದೇ ಪಕ್ಷ ಪುದುಚೇರಿಯಲ್ಲಿ ಸರ್ಕಾರ ರಚಿಸುವ ಹಕ್ಕು ಮಂಡಿಸಲಿಲ್ಲ. ಹೀಗಾಗಿ ಲೆಫ್ಟಿನೆಂಟ್ ಗವರ್ನರ್ ರಾಷ್ಟçಪತಿ ಆಡಳಿತಕ್ಕೆ ಶಿಫಾರಸು ಮಾಡಿದ್ದು, ಅದಕ್ಕೆ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದರು. ಇದಕ್ಕೆ ರಾಷ್ಟçಪತಿಗಳು ಸಹಿ ಹಾಕಿದ ನಂತರ ವಿಧಾನಸಭೆ ವಿಸರ್ಜನೆಯಾಗಲಿದೆ. ಪುದುಚೇರಿಯಲ್ಲಿ ಆಡಳಿತಾತ್ಮಕ ಕಾರ್ಯಗಳಿಗೆ ಅಗತ್ಯ ಕ್ರಮಗಳನ್ನು ಶೀಘ್ರದಲ್ಲೇ ಕೈಗೊಳ್ಳಲಾಗುವುದು ಎಂದು ಜಾವಡೇಕರ್ ಹೇಳಿದರು. ಕಳೆದ ಸೋಮವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸಲು ವಿಫಲವಾದ ವಿ. ನಾರಾಯಣಸ್ವಾಮಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು

ಕ್ರೀಡಾಂಗಣಕ್ಕೆ ಮೋದಿ ಹೆಸರು:ಹಾರ್ದಿಕ್ ಪಟೇಲ್ ಆಕ್ಷೇಪ

ಅಹಮದಾಬಾದ್, ಫೆ. ೨೪: ವಿಶ್ವದ ಅತಿದೊಡ್ಡ ಸರ್ದಾರ್ ಪಟೇಲ್ ಕ್ರಿಕೆಟ್ ಕ್ರೀಡಾಂಗಣವನ್ನು ಪ್ರಧಾನಿ ನರೇಂದ್ರ ಮೋದಿ ಕ್ರೀಡಾಂಗಣ ಎಂದು ಮರುನಾಮಕರಣ ಮಾಡಿದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್ ಅವರು, ಇದು ಸರ್ದಾರ್ ವಲ್ಲಭಬಾಯಿ ಪಟೇಲ್ ಅವರಿಗೆ ಮಾಡಿದ ಅವಮಾನ ಎಂದು ಹೇಳಿದ್ದಾರೆ. ಅಹಮದಾಬಾದ್ ಸರ್ದಾರ್ ಪಟೇಲ್ ಕ್ರಿಕೆಟ್ ಕ್ರೀಡಾಂಗಣವನ್ನು ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣ ಎಂದು ಮರುನಾಮಕರಣ ಮಾಡಲಾಗಿದೆ, ಇದು ಸರ್ದಾರ್ ಪಟೇಲ್‌ಗೆ ಅವಮಾನವಲ್ಲವೇ? ಎಂದು ಹಾರ್ದಿಕ್ ಪಟೇಲ್ ಪ್ರಶ್ನಿಸಿದ್ದಾರೆ. ಸರ್ದಾರ್ ಪಟೇಲ್ ಹೆಸರಿನಲ್ಲಿ ಮತ ಕೇಳಿದ ಬಿಜೆಪಿ ಈಗ ಅವಮಾನಿಸುತ್ತಿದೆ. ಸರ್ದಾರ್ ಪಟೇಲ್ ಅವರ ಅವಮಾನವನ್ನು ಗುಜರಾತ್ ಜನ ಸಹಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

ರೈತರೊಂದಿಗೆ ಮಾತುಕತೆ ನಡೆಸಲು ಸರ್ಕಾರ ಸಿದ್ಧ

ನವದೆಹಲಿ, ಫೆ. ೨೪: ವಿವಾದಾತ್ಮಕ ಮೂರು ಕಾನೂನುಗಳನ್ನು ಒಂದೂವರೆ ವರ್ಷಗಳ ಕಾಲ ಸ್ಥಗಿತಗೊಳಿಸಲು ರೈತರು ಒಪ್ಪಿಕೊಂಡರೆ ಅವರೊಂದಿಗೆ ಮಾತುಕತೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೃಷಿ ಮತ್ತು ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಕೃಷಿ ವಲಯವನ್ನು ಬಲಗೊಳಿಸಿ, ರೈತರ ಆದಾಯವನ್ನು ದುಪ್ಪಟ್ಟುಗೊಳಿಸಲು ಪ್ರಯತ್ನಿಸಲಾಗುತ್ತಿದೆ ಎಂದರು. ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸದಿದ್ದರೆ ೪೦ ಲಕ್ಷ ಟ್ರಾö್ಯಕ್ಟರ್‌ಗಳೊಂದಿಗೆ ಪಾರ್ಲಿಮೆಂಟ್ ಚಲೋ ನಡೆಸುವುದಾಗಿ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಅವರ ಬೆದರಿಕೆ ಕುರಿತಂತೆ ಪ್ರತಿಕ್ರಿಯಿಸಿದ ಸಚಿವರು, ರೈತ ಯೂನಿಯನ್ ಗಳೊಂದಿಗೆ ಮಾತುಕತೆ ನಡೆಸಲು ಸರ್ಕಾರ ಪ್ರಯತ್ನ ಮಾಡುತ್ತಿರುವುದಾಗಿ ತಿಳಿಸಿದರು.

ಯುಪಿಎಸ್‌ಸಿ ಪರೀಕ್ಷೆಗೆ ವಯೋಮಿತಿ ಸಡಿಲಗೊಳಿಸಲು ಸುಪ್ರೀಂ ನಕಾರ

ನವದೆಹಲಿ, ಫೆ. ೨೪: ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆ ಯುಪಿಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳು ವಯಸ್ಸಿನ ಸಡಿಲಿಕೆ ಕೋರಿ ಹಾಗೂ ಒಂದು ಬಾರಿ ಹೆಚ್ಚಿನ ಅವಕಾಶ ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ರಿಟ್ ಅರ್ಜಿಯನ್ನು ವಜಾಗೊಳಿಸಿರುವುದಾಗಿ ನ್ಯಾಯಮೂರ್ತಿ ಎ.ಎಂ ಖಾನ್ವಿಲ್ಕರ್ ನೇತೃತ್ವದ ನ್ಯಾಯಪೀಠ ಇಂದು ಪ್ರಕಟಿಸಿದೆ. ವಯೋಮಿತಿ ಸಡಿಲಗೊಳಿಸುವುದರಿಂದ ಇತರ ಆಕಾಂಕ್ಷಿಗಳಿಗೆ ಅನ್ಯಾಯವಾಗಲಿದೆ. ಕೋವಿಡ್ -೧೯ ಸಾಂಕ್ರಾಮಿಕವು ಎಲ್ಲರ ಮೇಲೆ ಪರಿಣಾಮ ಬೀರಿದೆ ಮತ್ತು ವಿನಾಯ್ತಿ ನೀಡುವುದರಿಂದ ಇತರ ಆಕಾಂಕ್ಷಿಗಳು ಇನ್ನೂ ಅನೇಕ ವಿನಂತಿಗಳನ್ನು ಆಹ್ವಾನಿಸಬಹುದು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ೧೦೦ ಆಕಾಂಕ್ಷಿಗಳ ಗುಂಪಿನ ಅರ್ಜಿದಾರರನ್ನು ಪ್ರತಿನಿದಿಸುವ ವಕೀಲೆ ಅನುಶ್ರೀ ಪ್ರಶಿತ್ ಕಪಾಡಿಯಾ, ಗರಿಷ್ಠ ವಯಸ್ಸಿನ ಮಿತಿ ದಾಟಿದವರಿಗೆ ಒಂದು ಬಾರಿ ಹೆಚ್ಚು ಪರೀಕ್ಷೆ ಬರೆಯುವ ಅವಕಾಶ ಕಲ್ಪಿಸದಿದ್ದರೆ ಅನ್ಯಾಯವಾಗುತ್ತದೆ ಎಂದು ವಾದಿಸಿದರು.