ಸೋಮವಾರಪೇಟೆ, ಮಾ. ೫: ತಾಲೂಕಿನ ಯಡವನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್.ಡಿ.ಎಂ.ಸಿ. ಸದಸ್ಯರಿಗೆ ತರಬೇತಿ ಕಾರ್ಯಾಗಾರ ನಡೆಯಿತು.
ಕಾರ್ಯಾಗಾರವನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷ ಕೆ.ಜಿ. ಲತೇಶ್ ಉದ್ಘಾಟಿಸಿದರು. ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ವಿದ್ಯಾರ್ಹತೆ ಹಾಗೂ ಅನುಭವಿ ಶಿಕ್ಷಕರು ಸರ್ಕಾರಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸರ್ಕಾರದಿಂದ ಉತ್ತಮ ಯೋಜನೆಗಳು ಗುಣಮಟ್ಟದ ಶಿಕ್ಷಣಕ್ಕೆ ಪೂರಕವಾಗಿದೆ. ಪೋಷಕರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸಬೇಕು ಎಂದು ಮನವಿ ಮಾಡಿದರು.
ಬಿ.ಆರ್.ಸಿ. ಶಶಿಧರ್ ಹಾಗೂ ಸಿ.ಆರ್.ಪಿ. ಗಿರೀಶ್ ಶಾಲೆಗಳ ಅಭಿವೃದ್ಧಿಯಲ್ಲಿ ಎಸ್.ಡಿ.ಎಂ.ಸಿ. ಸದಸ್ಯರು ಹಾಗೂ ಗ್ರಾಮಸ್ಥರ ಪಾಲ್ಗೊಳ್ಳುವಿಕೆಯ ಬಗ್ಗೆ ಮಾಹಿತಿ ನೀಡಿದರು. ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಶಿಕ್ಷಣ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಗ್ರಾಮ ಪಂಚಾಯಿತಿ ಸದಸ್ಯರಾದ ಜೋಯಪ್ಪ ಅವರನ್ನು ಇದೇ ಸಂದರ್ಭ ಅಭಿನಂದಿಸಲಾಯಿತು. ಶಾಲಾಭಿವೃದ್ಧಿಗೆ ಅನುದಾನ ಕಲ್ಪಿಸುವಂತೆ ಮುಖ್ಯ ಶಿಕ್ಷಕಿ ಮಮತ ಮನವಿ ಮಾಡಿದರು.