ಕೂಡಿಗೆ, ಮಾ. ೫: ಕಸ ವಿಲೇವಾರಿ ಘಟಕ ಆರಂಭವನ್ನು ವಿರೋಧಿಸಿ ಬ್ಯಾಡಗೊಟ್ಟ ಗ್ರಾಮದಲ್ಲಿರುವ ದಿಡ್ಡಳ್ಳಿ ಪುನರ್ವಸತಿ ಕೇಂದ್ರದ ನಿವಾಸಿಗಳು ಪ್ರತಿಭಟನೆ ನಡೆಸಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಯಿಷಾ ಅವರಿಗೆ ಮನವಿ ಸಲ್ಲಿಸಿದರು.

ಉದ್ದೇಶಿತ ಯೋಜನೆಯಿಂದ ಸಮಸ್ಯೆ ಉಂಟಾಗಲಿವೆ. ಕಸ ವಿಲೇವಾರಿ ಘಟಕದಿಂದ ರೋಗ ರುಜಿನ ಹರಡುವ ಸಾಧ್ಯತೆ ಇರುತ್ತದೆ. ಈ ನಿಟ್ಟಿನಲ್ಲಿ ಯೋಜನೆಯನ್ನು ವಿರೋಧಿಸಿ ಹಲವು ಬಾರಿ ಮನವಿ ಸಲ್ಲಿಸಿದರು ಯೋಜನೆ ಕೈಬಿಡುತ್ತಿಲ್ಲ ಎಂದು ಸಾರ್ವಜನಿಕರು ಆಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ, ಜಿ.ಪಂ. ಮುಖ್ಯಕಾರ್ಯನಿರ್ವಾಹಣಾಧಿಕಾರಿಗಳಿಗೆ ಈ ಸಂಬAಧ ಮನವಿ ಸಲ್ಲಿಸಿ ಮಾಹಿತಿ ನೀಡಲಾಗಿದೆ. ಆದರೆ, ಸ್ಥಳೀಯ ಅಧಿಕಾರಿಗಳು ಸರಿಯಾದ ಕ್ರಮ ವಹಿಸುತ್ತಿಲ್ಲ ಎಂದು ಆರೋಪಿಸಿದರು.

ಬ್ಯಾಡಗೊಟ್ಟ ಗ್ರಾಮದಿಂದ ಕೂಡಿಗೆ ತನಕ ಮೆರವಣಿಗೆ ಸಾಗಿದ ಪ್ರತಿಭಟನಾನಿರತರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಕಸ ವಿಲೇವಾರಿ ಘಟಕವನ್ನು ಪ್ರಾರಂಭ ಮಾಡಲು ಮುಂದಾದರೆ ವಿವಿಧ ಸಂಘಟನೆಗಳ ಬೆಂಬಲದೊAದಿಗೆ ಉಗ್ರಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಯಿಷಾ, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿ ಕಳೆದ ಎರಡು ವರ್ಷಗಳ ಹಿಂದೆ ಜಾಗವನ್ನು ಗುರುತಿಸಿ ಅದರ ಸಾದಕ-ಬಾದಕ ಚರ್ಚಿಸಿ ನಂತರ ತೀರ್ಮಾನವನ್ನು ಮೇಲ್ಮಟ್ಟದ ಅಧಿಕಾರಿಗಳು ತೆಗೆದುಕೊಂಡಿದ್ದಾರೆ. ಅವರ ಆದೇಶದಂತೆ ಗ್ರಾಮ ಪಂಚಾಯಿತಿ ಕಾರ್ಯನಿರ್ವಹಿಸಲು ಸಿದ್ಧವಾಗಿದೆ ಎಂದರು.

-ಕೆ.ಕೆ. ನಾಗರಾಜಶೆಟ್ಟಿ