ಕರಿಕೆ, ಮಾ. ೯: ಇಲ್ಲಿನ ಗ್ರಾಮ ಪಂಚಾಯಿತಿಯ ನೂತನ ಆಡಳಿತ ಮಂಡಳಿಯ ಪ್ರಥಮ ಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಲ್ಪನಾ ಜಗದೀಶ್ ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ಕಳೆದ ಸಾಲಿನ ಕ್ರಿಯಾ ಯೋಜನೆಯಲ್ಲಿರುವ ಕಾಮಗಾರಿಗಳನ್ನು ಮಾರ್ಚ್ ಹದಿನೈದರೊಳಗೆ ಪೂರ್ಣಗೊಳಿಸುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಣಪತಿಯವರು ಸಭೆಗೆ ತಿಳಿಸಿದರು. ಗ್ರಾಮದಲ್ಲಿ ಶುಚಿತ್ವದ ಬಗ್ಗೆ ಹೆಚ್ಚು ಗಮನಹರಿಸುವುದು, ಕೋವಿಡ್ ನಿಯಂತ್ರಣಕ್ಕೆ ಸರಕಾರದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುವುದು ಸೇರಿದಂತೆ ರಾಜೀವ್ ಗಾಂಧಿ ವಸತಿ ನಿಗಮದ ಮನೆಗಳ ನಿರ್ಮಾಣ ಕಾರ್ಯ ಒಂದು ವರ್ಷದಿಂದ ಸ್ಥಗಿತವಾಗಿರುವ ಬಗ್ಗೆ ತಾಲೂಕು ಕಾರ್ಯನಿರ್ವಹಣಾ ಅಧಿಕಾರಿಗೆ ಪತ್ರ ಬರೆಯುವಂತೆ ತೀರ್ಮಾನಿಸಲಾಯಿತು. ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ನಿರ್ಣಯ ಕೈಗೊಳ್ಳಲಾಯಿತು. ಕೇಂದ್ರ ಸರಕಾರದ ಮಹತ್ವದ ಯೋಜನೆಯಾದ ಜಲ ಜೀವನ ಮಿಷನ್ ಯೋಜನೆಯಡಿ ಒಂದು ಕೋಟಿ ನಲವತ್ತೆರಡು ಲಕ್ಷದ ಎಪ್ಪತ್ತೇಳು ಸಾವಿರ ಅನುದಾನ ಬಿಡುಗಡೆಯಾಗಿದ್ದು, ಗ್ರಾಮದ ಪ್ರತಿಯೊಂದು ಮನೆಗೆ ನಲ್ಲಿ ಸಂಪರ್ಕ ಒದಗಿಸಲು ಕ್ರಮ ಕೈಗೊಳ್ಳಲಾಗುವುದೆಂದು ಅಭಿವೃದ್ಧಿ ಅಧಿಕಾರಿ ತಿಳಿಸಿದರು. ಸಭೆಯಲ್ಲಿ ಉಪಾಧ್ಯಕ್ಷ ಬಾಲಚಂದ್ರ ನಾಯರ್, ಸದಸ್ಯರಾದ ಪುರುಷೋತ್ತಮ ಬಿ.ಕೆ., ಕೆ.ಎ. ನಾರಾಯಣ, ದೀಪಿಕಾ, ಆಯಿಷಾ ಸೇರಿದಂತೆ ಇತರ ಸದಸ್ಯರು, ಸಿಬ್ಬಂದಿಗಳು ಹಾಜರಿದ್ದರು.