ಮಡಿಕೇರಿ, ಮಾ. ೮: ಕೊಡಗು ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ದಂಡಪ್ರಕ್ರಿಯಾ ಸಂಹಿತೆ ೧೯೭೩ ಕಲಂ೧೪೪ ರಡಿ ಹಾಗೂ ಡಿಸಾಸ್ಟರ್ ಮ್ಯಾನೇಜ್‌ಮೆಂಟ್ ಆಕ್ಟ್-೨೦೦೫ ರಡಿಯಲ್ಲಿ ದತ್ತವಾದ ಅಧಿಕಾರದಂತೆ ತಕ್ಷಣದಿಂದ ಜಾರಿಗೆ ಬರುವಂತೆ ಕೊಡಗು ಜಿಲ್ಲೆಯಾದ್ಯಂತ ಮುಂದಿನ ದಿನಗಳಲ್ಲಿ ಆಚರಿಸಲ್ಪಡುವ ಎಲ್ಲಾ ರೀತಿಯ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರ ಭಾಗವಹಿಸುವಿಕೆಯನ್ನು ತಾ. ೩೧ ರವರೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ದಂಡಾಧಿಕಾರಿ ಚಾರುಲತಾ ಸೋಮಲ್ ಆದೇಶ ಹೊರಡಿಸಿದ್ದಾರೆ.

ಪ್ರಾರ್ಥನಾ ಮಂದಿರ, ಪೂಜಾ ಮಂದಿರ, ದೇವಸ್ಥಾನಗಳಲ್ಲಿ ಆಡಳಿತ ಮಂಡಳಿ ವತಿಯಿಂದ ನಡೆಸುವ ದೈನಂದಿನ ಧಾರ್ಮಿಕ ಕಾರ್ಯಕ್ರಮ, ಪ್ರಾರ್ಥನೆ ಇತ್ಯಾದಿಗಳನ್ನು ಸರ್ಕಾರದ ಮಾರ್ಗಸೂಚಿಯಂತೆ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು, ಸ್ಯಾನಿಟೈಸರ್ ಬಳಕೆ ಮಾಡುವುದು ಮತ್ತಿತರ ಕ್ರಮಗಳನ್ನು ಕೈಗೊಂಡು ನಡೆಸಲು ಅಡ್ಡಿ ಇರುವುದಿಲ್ಲ.

ಆಡಳಿತ ಮಂಡಳಿಯ ಸದಸ್ಯರು, ಪ್ರಾರ್ಥನೆ ಸಲ್ಲಿಸುವವರು ಮತ್ತು ಇತರೆ ಸಹಾಯಕರು ಕಡ್ಡಾಯವಾಗಿ ೭೨ ಗಂಟೆಗಳ ಒಳಗೆ ಪಡೆದಿರುವ ಆರ್‌ಟಿ-ಪಿಸಿಆರ್ ನೆಗೆಟಿವ್ ವರದಿ ಹೊಂದಿರಬೇಕು. ಕಾಲ ಕಾಲಕ್ಕೆ ಸರಿಯಾಗಿ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಮಾಡಿಸಿಕೊಂಡು ನೆಗೆಟಿವ್ ವರದಿಯನ್ನು ಹೊಂದಿರತಕ್ಕದ್ದು. ಈ ಆದೇಶದ ಉಲ್ಲಂಘನೆಯು ಭಾರತ ದಂಡ ಸಂಹಿತೆ ಕಲಂ-೧೮೮ರಡಿ ವಿವಿಧ ಕಾಯ್ದೆಗಳಡಿ ದಂಡನೀಯವಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.