ಶನಿವಾರಸAತೆ, ಮಾ. ೧೨: ಕೃಷಿ ಇಲಾಖೆ ಅಧಿಕಾರಿಗಳು ಕಚೇರಿಗೆ ಬರುವ ರೈತರನ್ನು ಸತಾಯಿಸದೆ ಸ್ಪಂದಿಸಿ ಕೆಲಸ ಮಾಡಿಕೊಡಬೇಕೆಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು. ಸಮೀಪದ ಕೊಡ್ಲಿಪೇಟೆ ಯಲ್ಲಿ ಕೃಷಿ ಇಲಾಖೆ ವತಿಯಿಂದ ರೂ. ೫೦ ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಹೋಬಳಿ ರೈತ ಸಂಪರ್ಕ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರದ ಅನುದಾನದಲ್ಲಿ ಕಟ್ಟಡವನ್ನು ನಿರ್ಮಿಸಲಾಗಿದ್ದು, ಜಿಲ್ಲೆಗೆ ೫ ಕೇಂದ್ರಗಳು ಮಂಜೂರಾಗಿವೆ. ದೇಶದಲ್ಲಿ ೭೦ ಪ್ರತಿಶತಃ ರೈತರಿದ್ದಾರೆ. ಕೃಷಿಕರು ಗುಣಮಟ್ಟದ ಬೆಳೆ ಬೆಳೆದರೆ ಬೇಡಿಕೆ ಜಾಸ್ತಿಯಾಗಿ ಉತ್ತಮ ದರ ದೊರೆಯಲಿದೆ. ಕೃಷಿ ತಿದ್ದುಪಡಿ ಕಾಯ್ದೆಯಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ಜಿಲ್ಲಾ ಉಪ ಕೃಷಿ ನಿರ್ದೇಶಕ ಕೆ. ರಾಜು, ಕಲ್ಲುಮಠದ ಮಹಾಂತ ಸ್ವಾಮೀಜಿ, ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ, ಜಿಲ್ಲಾ ಪಂಚಾಯಿತಿ ಸದಸ್ಯ ಪುಟ್ಟರಾಜು, ಕೃಷಿ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ರಾಜಶೇಖರ್, ತಾಲೂಕು ಸಹಾಯಕ ಕೃಷಿ ನಿರ್ದೇಶಕ ಆರ್.ಕೆ. ಯಾದವ್ ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಸದಸ್ಯೆ ಸರೋಜಮ್ಮ, ತಾಲೂಕು ಪಂಚಾಯಿತಿ ಸದಸ್ಯ ಕುಶಾಲಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಆರ್. ಚಂದ್ರಶೇಖರ್ ಉಪಸ್ಥಿತರಿದ್ದರು.