ಕೆ.ಜಿ. ಬೋಪಯ್ಯ
ವೀರಾಜಪೇಟೆ, ಮಾ. ೧೫: ಸಮಾಜದ ಏಳಿಗೆ ಹಾಗೂ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವುದು ಅಗತ್ಯವಾಗಿದೆ ಎಂದು ಶಾಸಕ ಕೆ.ಜಿ. ಬೋಪಯ್ಯ ಅಭಿಪ್ರಾಯಪಟ್ಟರು.
ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವೀರಾಜಪೇಟೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ವೀರಾಜಪೇಟೆಯ ಸಂತ ಅನ್ನಮ್ಮ ಶಾಲೆಯ ಸಭಾಂಗಣದಲ್ಲಿ ನಡೆದ ೨೦೨೦-೨೦೨೧ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಫಲಿತಾಂಶ ಉತ್ತಮ ಪಡಿಸಲು ಹಿಂದಿ ಭಾಷಾ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರುಗಳಿಗೆ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಪಾಲಕರು, ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ವಿದ್ಯಾರ್ಥಿಗಳ ಮನಸ್ಸಿನಲ್ಲಿ ಪಾಲಕರು ಆತ್ಮಸ್ಥೆöÊರ್ಯ ತುಂಬಬೇಕು. ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರ ಹಾಕುವ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.
ಸಂತ ಅನ್ನಮ್ಮ ಶಾಲೆಯ ವ್ಯವಸ್ಥಾಪಕ ಮದಲೈಮುತ್ತು ಮಾತನಾಡಿ, ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವಲ್ಲಿ ಅಧ್ಯಾಪಕರ ಪಾತ್ರ ಹಿರಿದು. ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಕುರಿತಾಗಿ ಶಿಕ್ಷಕರುಗಳಿಗೆ ತರಬೇತಿ ನೀಡುವ ಕಾರ್ಯಕ್ರಮವನ್ನು ಶಿಕ್ಷಣ ಇಲಾಖೆ ಹಮ್ಮಿಕೊಂಡಿರುವುದು ಸ್ವಾಗತಾರ್ಹವಾಗಿದೆ ಎಂದರು.
ವೀರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೀಳಗಿ ಮಾತನಾಡಿ, ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವಲ್ಲಿ, ಪರಿಶ್ರಮ ವಹಿಸುವುದು ನಮ್ಮ ಕರ್ತವ್ಯ ಎಂದರಲ್ಲದೆ ಸರಕಾರ ನೀಡಿರುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಶಿಕ್ಷಣದ ಗುಣಮಟ್ಟ ಹೆಚ್ಚಿಸುವಲ್ಲಿ ಶಿಕ್ಷಕರು ಮಹತ್ವದ ಪಾತ್ರ ವಹಿಸಬೇಕು ಎಂದರು.
ತಾಲೂಕು ಪಂಚಾಯಿತಿ ಅಧ್ಯಕ್ಷೆ ಸ್ಮಿತಾ ಪ್ರಕಾಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯಿತಿ ಸದಸ್ಯೆ ಅಪ್ಪಂಡೇರAಡ ಭವ್ಯ, ಶಶಿ ಸುಬ್ರಮಣಿ, ಹಾಗೂ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ನೆಲ್ಲೀರ ಚಲನ್ ಕುಮಾರ್, ಎಸ್‌ಎಸ್‌ಎಲ್‌ಸಿ ನೋಡಲ್ ಅಧಿಕಾರಿ ಪಿ.ಆರ್. ಅಯ್ಯಪ್ಪ ಇನ್ನಿತರರು ವೇದಿಕೆಯಲ್ಲಿದ್ದರು.
ಈ ಸಂದರ್ಭ ರಾಜ್ಯ ಸಂಪನ್ಮೂಲ ವ್ಯಕ್ತಿ ಹಾಗೂ ಹಿಂದಿ ಭಾಷಾ ಪಠ್ಯ ಪುಸ್ತಕ ರಚನಾ ಸಮಿತಿ ಸದಸ್ಯೆ ಪಿ.ವಿ. ಪದ್ಮಿನಿ ಅವರನ್ನು ಸನ್ಮಾನಿಸಲಾಯಿತು. ಶಿಕ್ಷಕರಾದ ಶರತ್ ಕುಮಾರ್ ನಿರೂಪಿಸಿ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ವನಜಾಕ್ಷಿ ಸ್ವಾಗತಿಸಿದರೆ, ಬಿ.ಪಿ. ಉತ್ತಪ್ಪ ವಂದಿಸಿದರು