ಮಡಿಕೇರಿ, ಮಾ. ೧೬: ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸುವಂತೆ ಒತ್ತಾಯಿಸಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ವತಿಯಿಂದ ತಾ. ೧೯ ರಿಂದ ೨೨ ರವರೆಗೆ ತುಮಕೂರಿನ ಯಡಿಯೂರಿನಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿವಾಸದವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಇದಕ್ಕೆ ಜಿಲ್ಲಾ ಘಟಕ ಬೆಂಬಲ ವ್ಯಕ್ತಪಡಿಸಿದೆ ಎಂದು ವೇದಿಕೆ ಜಿಲ್ಲಾಧ್ಯಕ್ಷ ಪುತ್ತರಿರ ದೇವಯ್ಯ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾದಯಾತ್ರೆಗೆ ಹೋರಾಟಗಾರರು, ನಿವೃತ್ತ ಅಧಿಕಾರಿಗಳು ಆಗಮಿಸುತ್ತಿದ್ದು, ಕೊಡಗಿನಿಂದ ೩೦ಕ್ಕೂ ಹೆಚ್ಚು ಕಾರ್ಯಕರ್ತರು ಜಾಥಾದಲ್ಲಿ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
ವೇದಿಕೆಯ ಮಡಿಕೇರಿ ತಾಲೂಕು ಕಾರ್ಯದರ್ಶಿ ಉಮೇಶ್ ಗೌಡ ಮಾತನಾಡಿ, ಸರಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸ ಕಾರ್ಯಕ್ಕೆ ವಿನಾಕಾರಣ ವಿಳಂಬವಾಗುತ್ತಿದ್ದರೆ, ಲಂಚದ ಆಮಿಷ ಒಡ್ಡಿದರೆ, ಸರಕಾರಿ ಅಧಿಕಾರಿಗಳಿಂದ ಅನ್ಯಾಯಕ್ಕೆ ಒಳಗಾಗಿದ್ದಾರೆ ವೇದಿಕೆಯ ಗಮನಕ್ಕೆ ತರಬಹುದು ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಜಿತ್ ಪಾಲ್ತಾಡ್, ಮಡಿಕೇರಿ ತಾಲೂಕು ಅಧ್ಯಕ್ಷ ಅಜಿತ್ ಕೊಟ್ಟಕೇರಿಯನ, ಪ್ರಧಾನ ಕಾರ್ಯದರ್ಶಿ ಯೋಗಿಶ್ ಟಿ. ನೆಕ್ಕಿಲ, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಭವಿನ್ ಇದ್ದರು.