ಸಿದ್ದಾಪುರ, ಮಾ. ೨೨: ಮಾಲ್ದಾರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ವೀರಾಜಪೇಟೆ ತಾಲೂಕು ತಹಶೀಲ್ದಾರ್ ಯೋಗಾನಂದ ಹಾಗೂ ಸಿಬ್ಬಂದಿಗಳು ಗ್ರಾಮ ವಾಸ್ತವ್ಯವನ್ನು ಮಾಡಿದರು. ಸರ್ಕಾರದ ಆದೇಶದಂತೆ ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ ಕಾರ್ಯಕ್ರಮದ ಭಾಗವಾಗಿ ಮಾಲ್ದಾರೆ ಗ್ರಾ.ಪಂ ವ್ಯಾಪ್ತಿಯ ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಜನರ ಕುಂದುಕೊರತೆಗಳನ್ನು ಲಿಖಿತವಾಗಿ ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳಲು ಆಧಾರ್ ಕಾರ್ಡ್ ಸೇರಿದಂತೆ ಅಗತ್ಯ ದಾಖಲಾತಿಗಳನ್ನು ಹೊಂದಿಕೊಳ್ಳಲು ಗ್ರಾ.ಪಂ ಯಲ್ಲಿ ಕಂದಾಯ ಇಲಾಖಾ ಅಧಿಕಾರಿಗಳೊಂದಿಗೆ ತಿಂಗಳಿಗೊಮ್ಮೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಲಾಗುವುದೆಂದು ತಹಶೀಲ್ದಾರ್ ಯೋಗಾನಂದ ತಿಳಿಸಿದರು. ಇದರ ಸದುಪಯೋಗವನ್ನು ಗ್ರಾಮಸ್ಥರು ಪಡೆದುಕೊಳ್ಳುವಂತೆ ಸಲಹೆ ನೀಡಿದರು. ತಾಲೂಕು ಕಚೇರಿಗಳಿಂದ ಕಂದಾಯ ಇಲಾಖೆಯ ಮುಖಾಂತರ ತಕ್ಷಣ ಸಿಗುವ ದಾಖಲಾತಿಗಳನ್ನು ಒಂದು ದಿನದ ಒಳಗೆ ಜನರ ಮನೆ ಬಾಗಿಲಿಗೆ ತಲುಪಿಸುವಂತೆ ಕಂದಾಯ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದರು. ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಅಭಿವೃದ್ಧಿಯೊಂದಿಗೆ ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಕರೆ ನೀಡಿದರು.
ಮಾಲ್ದಾರೆ ಗ್ರಾ.ಪಂ ವ್ಯಾಪ್ತಿಯಲ್ಲಿ ಸಾರ್ವಜನಿಕ ಆಟದ ಮೈದಾನ ಇಲ್ಲದಿರುವ ಬಗ್ಗೆ ಜನಪರ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ರವರ ಗಮನ ಸೆಳೆದರು. ಅಲ್ಲದೆ ಸಾರ್ವಜನಿಕ ಮೈದಾನಕ್ಕೆ ಜಾಗವನ್ನು ಗುರುತಿಸಿಕೊಡುವಂತೆ ಮನವಿ ಮಾಡಿಕೊಂಡರು. ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಯೋಗಾನಂದ ಈಗಾಗಲೇ ಈ ಭಾಗದಲ್ಲಿ ಒಂದು ಎಕರೆ ಜಾಗವನ್ನು ಸ್ಮಶಾನಕ್ಕೆ ಗುರುತಿಸಲಾಗಿದ್ದು, ಗ್ರಾಮ ವ್ಯಾಪ್ತಿಯಲ್ಲಿ ಹಲವು ಕಡೆ ಆಟದ ಮೈದಾನಕ್ಕೆ ಜಾಗ ಗುರುತಿಸಲಾಗಿದೆ. ಸದ್ಯದಲ್ಲೇ ಮಾಲ್ದಾರೆ ವ್ಯಾಪ್ತಿಯ ಆಟದ ಮೈದಾನದ ಸಮಸ್ಯೆಯನ್ನು ಬಗೆಹರಿಸ ಲಾಗುವುದೆಂದು ಭರವಸೆಯನ್ನು ನೀಡಿದರು. ಇದೇ ಸಂದರ್ಭದಲ್ಲಿ ಹಕ್ಕುಪತ್ರ, ಮತದಾರರ ಗುರುತಿನ ಚೀಟಿ ಸೇರಿದಂತೆ ಹಲವು ಯೋಜನೆಗಳಿಗೆ ಅರ್ಜಿಗಳನ್ನು ಸಲ್ಲಿಸಿದ್ದ ಫಲಾನುಭವಿಗಳಿಗೆ ಸ್ಥಳದಲ್ಲೇ ವಿತರಿಸಲಾಯಿತು.
ಇದೇ ಸಂದರ್ಭ ಗ್ರಾ.ಪಂ ಸದಸ್ಯರುಗಳು ಹಾಗೂ ಗ್ರಾಮಸ್ಥರು ವನ್ಯ ಪ್ರಾಣಿಗಳ ಹಾವಳಿ ಗ್ರಾಮದಲ್ಲಿ ಹೆಚ್ಚಾಗಿದ್ದು, ಇವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಾಶ್ವತ ಯೋಜನೆಗಳನ್ನು ರೂಪಿಸಬೇಕೆಂದು ಮನವಿ ಮಾಡಿಕೊಂಡರು. ಅರಣ್ಯದಂಚಿನಲ್ಲಿ ವಾಸವಾಗಿರುವ ಇತರ ಪಾರಂಪರಿಕ ವಾಸಿಗಳ ಸಮಸ್ಯೆಗಳ ಈಡೇರಿಕೆ ಹಾಗೂ ವಸತಿ ಯೋಜನೆ, ಮಳೆ ಹಾನಿ ಪರಿಹಾರ, ವಿದ್ಯುತ್ ಸಮಸ್ಯೆ ಸೇರಿದಂತೆ ಇತರ ಮೂಲಭೂತ ಸೌಕರ್ಯದ ಕೊರತೆಗಳ ಬಗ್ಗೆ ತಹಶೀಲ್ದಾರ್ ಗಮನಕ್ಕೆ ತಂದು ಬಗೆಹರಿಸಿಕೊಡುವಂತೆ ಮನವಿ ಮಾಡಿಕೊಂಡರು. ಸಭೆಯಲ್ಲಿ ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಕಾವ್ಯರಾಣಿ, ಉಪತಹಶೀಲ್ದಾರ್ ಪೊನ್ನು, ತಾಲೂಕು ಕಾರ್ಯನಿರ್ವಹಣಾಧಿಕಾರಿ ಅಪ್ಪಣ್ಣ, ಶಿರಸ್ತೇದಾರ್ ರಾಧಾಕೃಷ್ಣ, ಕ್ಷೇತ್ರ ಶಿಕ್ಷಣ ಅಧಿಕಾರಿ ಶ್ರೀಶೈಲ ಬೀಳಗಿ, ತಾ.ಪಂ ಸದಸ್ಯೆ ಚಿನ್ನಮ್ಮ, ಮಾಲ್ದಾರೆ ಗ್ರಾ.ಪಂ ಅಧ್ಯಕ್ಷ ಸಮೀರ್, ತಾಲೂಕು ವೈದ್ಯಾಧಿಕಾರಿ ಡಾ. ಯತಿರಾಜ್, ಸೆಸ್ಕ್ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಸುರೇಶ್, ಕಂದಾಯ ಪರಿವೀಕ್ಷಕ ಎಂ.ಎಲ್ ಹರೀಶ್, ಪಶು ಸಂಗೋಪನೆ ಇಲಾಖೆಯ ಮುಖ್ಯಾಧಿಕಾರಿ ಡಾ. ಎ.ಬಿ ತಮ್ಮಯ್ಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್, ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿ ವನಜಾಕ್ಷಿ, ಜನಪರ ಸಂಘದ ಅಧ್ಯಕ್ಷ ಆಂಟೋನಿ, ಗ್ರಾಮ ಲೆಕ್ಕಿಗರಾದ ಹೋಮಪ್ಪ ಬಣಾಕರ್, ಗೌಡಜ, ಮುತ್ತಪ್ಪ, ಮೋನಿಕಾ, ಭಾನುಪ್ರಿಯಾ, ಹಸೀನಾ ಸೇರಿದಂತೆ ಗ್ರಾ.ಪಂ. ಸದಸ್ಯರುಗಳು ಹಾಗೂ ವಿವಿಧ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.
-ವರದಿ: ವಾಸು ಎ.ಎನ್.