ಸುಂಟಿಕೊಪ್ಪ, ಮಾ. ೨೭: ವಿದ್ಯಾರ್ಥಿಗಳು ದೇಶದ ವಿಜ್ಞಾನಿಗಳ ಸಂಶೋಧನೆ ಮತ್ತು ಅವರ ಸಾಧನೆಯ ಬಗ್ಗೆ ಹೆಚ್ಚಿನ ಅಧ್ಯಯನ ಕೈಗೊಳ್ಳುವ ಮೂಲಕ ಮೂಲ ವಿಜ್ಞಾನ ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿ ತೋರಬೇಕು ಎಂದು ವಿಜ್ಞಾನ ಕಾರ್ಯಕ್ರಮಗಳ ಸಂಘಟಕರೂ ಆದ ಕೂಡು ಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್ ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಸುಂಟಿಕೊಪ್ಪ ಸಮೀಪದ ಕಾನ್‌ಬೈಲ್ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ಸಂಘದ ವತಿಯಿಂದ ಏರ್ಪಡಿಸಿದ್ದ ರಾಷ್ಟಿçÃಯ ವಿಜ್ಞಾನ ದಿನಾಚರಣೆ ಹಾಗೂ ವಿಜ್ಞಾನ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ವಿಜ್ಞಾನ ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿ ಹಾಗೂ ಕುತೂಹಲ ಬೆಳೆಸಿಕೊಂಡು ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಹೊಂದಬೇಕು ಎಂದರು.

ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಜನಪ್ರಿಯಗೊಳಿಸುವ ಮೂಲಕ ದೇಶದ ವೈಜ್ಞಾನಿಕ ಮನಸ್ಸಿನ ನಾಗರಿಕರಿಗೆ ಸೂಕ್ತ ಅವಕಾಶ ನೀಡುವುದು ವಿಜ್ಞಾನ ದಿನದ ವಿಶೇಷವಾಗಿದೆ ಎಂದರು.

ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿಗಳು ಸ್ವತಃ ತಾವೇ ಉತ್ತಮವಾಗಿ ವಿಜ್ಞಾನ ಪ್ರಯೋಗಗಳನ್ನು ಪ್ರದರ್ಶಿಸಿದ್ದನ್ನು ಪ್ರೇಮಕುಮಾರ್ ಶ್ಲಾಘಿಸಿದರು.

ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯ ಶಿಕ್ಷಕ ಎಂ.ವಿ. ಮಂಜೇಶ್ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನದಲ್ಲಿ ವಿವಿಧ ವೈಜ್ಞಾನಿಕ ಚಟುವಟಿಕೆಗಳ ಮೂಲಕ ಹೊಸ ಹೊಸ ಪ್ರಯೋಗಗಳನ್ನು ಮಾಡುವಂತೆ ಪ್ರೇರೇಪಿಸಲು ಇಂತಹ ವಿಜ್ಞಾನ ವಸ್ತು ಪ್ರದರ್ಶನಗಳು ಸಹಕಾರಿಯಾಗಿವೆ. ವಿದ್ಯಾರ್ಥಿಗಳು ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮಲ್ಲಿ ಸಂಶೋಧನಾ ಪ್ರವೃತ್ತಿ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ವಿಜ್ಞಾನ ಶಿಕ್ಷಕಿ ಎನ್.ಕೆ. ಮಾಲಾದೇವಿ ಮಾತನಾಡಿ, ಶಾಲೆಯಲ್ಲಿ ವಿಜ್ಞಾನ ಸಂಘದ ಮೂಲಕ ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆಗೆ ವಿಶೇಷ ಒತ್ತು ನೀಡುವ ಉದ್ದೇಶದಿಂದ ವಿವಿಧ ವೈಜ್ಞಾನಿಕ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ ಎಂದರು.

ಶಿಕ್ಷಕರಾದ ಕೆ.ಎನ್. ದಿನೇಶ್, ಪಿ. ನವೀನ್‌ಕುಮಾರ್, ಎಂ.ವಿ. ದಿವ್ಯ, ಲತಾ ಪೈ, ಜಿ.ಕೆ. ಪಾರ್ವತಿ, ಹೆಚ್.ಎಲ್. ಸವಿತಾ ಇದ್ದರು. ವಿಜ್ಞಾನದ ವಿವಿಧ ಸ್ಪರ್ಧೆಯಲ್ಲಿ ವಿಜೇತಗೊಂಡ ವಿದ್ಯಾರ್ಥಿಗಳಿಗೆ ವಿಜ್ಞಾನ ಪುಸ್ತಕವನ್ನು ಬಹುಮಾನ ರೂಪದಲ್ಲಿ ಶಿಕ್ಷಕರು ವಿತರಿಸಿದರು. ವಿದ್ಯಾರ್ಥಿಗಳು ವಿಜ್ಞಾನ ಮತ್ತು ಪರಿಸರ ಗೀತೆ ಹಾಡಿದರು.

ಇದಕ್ಕೂ ಮೊದಲು ವಿದ್ಯಾರ್ಥಿಗಳು ತಾವು ತಯಾರಿಸಿದ್ದ ವಿವಿಧ ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿ ಪ್ರಯೋಗಗಳ ಕುರಿತು ವಿವರಿಸಿದರು.