ಕಣಿವೆ, ಏ. ೪: ಕುಶಾಲನಗರದ ಸರ್ಕಾರಿ ಆಸ್ಪತ್ರೆಯ ಬಳಿ ರೂ. ೫೦ ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಸರ್ಕಾರಿ ಆಯುರ್ವೇದ ಆಸ್ಪತ್ರೆಯ ಕಟ್ಟಡ ತಾ. ೫ ರಂದು ಉದ್ಘಾಟನೆಗೆ ಸಿದ್ಧಗೊಂಡಿದೆ.
ಕಳೆದ ಎರಡು ವರ್ಷಗಳ ಹಿಂದೆ ಈ ಆಸ್ಪತ್ರೆಯ ಕಟ್ಟಡಕ್ಕೆ ಶಾಸಕ ಅಪ್ಪಚ್ಚು ರಂಜನ್ ಶಿಲಾನ್ಯಾಸ ನೆರವೇರಿಸಿದ್ದರು. ಕಳೆದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಕೊನೆ ಅವಧಿಯಲ್ಲಿ ಕುಶಾಲನಗರದಲ್ಲಿ ಆರಂಭವಾದ ಸರ್ಕಾರಿ ಆಯುರ್ವೇದ ಆಸ್ಪತ್ರೆ ಆರಂಭದ ಕೆಲವು ತಿಂಗಳು ಸರ್ಕಾರಿ ಆಸ್ಪತ್ರೆಗೆ ಸೇರಿದ ಸಿಬ್ಬಂದಿ ವಸತಿ ಗೃಹದಲ್ಲಿ ನಡೆಯುತ್ತಾ ಬಂದಿದ್ದು, ಬಳಿಕ ಲೋಕೋಪಯೋಗಿ ಇಲಾಖೆಯ ಅಭಿಯಂತರರಿಗೆ ಸೇರಿದ ವಸತಿ ಕಟ್ಟಡದಲ್ಲಿ ನಡೆಯುತ್ತಿತ್ತು. ಇದೀಗ ಸ್ವಂತ ಕಟ್ಟಡವನ್ನು ಹೊಂದಿರುವ ಸರ್ಕಾರಿ ಆಯುರ್ವೇದ ಆಸ್ಪತ್ರೆ ತಾ. ೫ ರಿಂದ ಕಾರ್ಯಾರಂಭ ಮಾಡಲಿದೆ.