ಕೂಡಿಗೆ, ಏ. ೬: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ಶಿಕ್ಷಣ ಇಲಾಖೆ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಕೂಡಿಗೆ ಡಯಟ್ ಸಂಸ್ಥೆ ಆಶ್ರಯದಲ್ಲಿ ಕೂಡಿಗೆಯ ಕಾಬ್ಸೆಟಿ ಕೇಂದ್ರದಲ್ಲಿ ಎರಡು ದಿನಗಳ ಕಾಲ ಏರ್ಪಡಿಸಿದ್ದ ರಾಜ್ಯಮಟ್ಟದ ಜನ ವಿಜ್ಞಾನ ಚಳವಳಿ ಕಾರ್ಯಾಗಾರ ದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಹಾಗೂ ಶಿಕ್ಷಕರ ಸಂಘಟನೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸಿದರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಳೆದ ಸಾಲಿನಲ್ಲಿ ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾದ ಮಡಿಕೇರಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯೂ ಆದ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿಯ ಮಾಜಿ ಉಪಾಧ್ಯಕ್ಷೆ ಡಿ.ಎಂ. ರೇವತಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಹೆಚ್.ಎಸ್. ಚೇತನ್ ಹಾಗೂ ಕೂಡಿಗೆ ಕಾಬ್ಸೆಟೆ ಕೇಂದ್ರದ ನಿರ್ದೇಶಕ ಡಾ ಜಿ. ಸುರೇಶ್ ಅವರನ್ನು ಸನ್ಮಾನಿಸಲಾಯಿತು.
ಇದೇ ವೇಳೆ ನಾಡಿನ ಜನ ವಿಜ್ಞಾನ ಚಳವಳಿಯ ಮುಖಂಡರೂ ಆದ ಸರ್ಕಾರಿ ಪ್ರಾಥಮಿಕ ಶಾಲೆಯ ಶೈಕ್ಷಣಿಕ ಪ್ರಗತಿಗೆ ಶ್ರಮಿಸುತ್ತಿರುವ ರಾಜ್ಯ ವಿಜ್ಞಾನ ಪರಿಷತ್ತಿನ ಗೌರವ ಕೋಶಾಧಿಕಾರಿ ಈ ಬಸವರಾಜ್ ಅವರನ್ನು ಕೊಡಗು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸ ಲಾಯಿತು. ರಾಜ್ಯ ವಿಜ್ಞಾನ ಪರಿಷತ್ತಿನ ಮಾಜಿ ಉಪಾಧ್ಯಕ್ಷ ಚಳ್ಳಕೆರೆ ಯರ್ರೀಸ್ವಾಮಿ ಹಾಗೂ ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್ ಸನ್ಮಾನಿತರಿಗೆ ಶಾಲು ಹೊದಿಸಿ ಸನ್ಮಾನಿಸಿದರು. ವಿಜ್ಞಾನ ಪರಿಷತ್ತಿನ ಮಾಜಿ ಜಂಟಿ ಕಾರ್ಯದರ್ಶಿ ಟಿ.ಜಿ. ಪ್ರೇಮ ಕುಮಾರ್, ಮಹಿಳಾ ಸಂಘಟಕರಾದ ಬೇಲೂರಿನ ಸೌಭಾಗ್ಯಮ್ಮ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಹೆಚ್.ಎನ್. ಮಂಜುನಾಥ್, ಸಂಘದ ತಾಲೂಕು ಘಟಕದ ಅಧ್ಯಕ್ಷ ಟಿ.ಕೆ. ಬಸವರಾಜ್, ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಡಿ.ಪಿ. ಧರ್ಮಪ್ಪ, ವಿಜ್ಞಾನ ಪರಿಷತ್ತಿನ ಜಿಲ್ಲಾ ಸಂಘಟನಾ ಸಮಿತಿಯ ಪದಾಧಿಕಾರಿಗಳು ಇದ್ದರು