ಮಡಿಕೇರಿ, ಏ. ೮: ಹೊಸ ಬಿಪಿಎಲ್ ಪಡಿತರ ಚೀಟಿ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ಕಲ್ಪಿಸಿದ್ದು, ಆ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಇನ್ನಷ್ಟು ಮಾಹಿತಿ ನೀಡುವಂತೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗೆ ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್ ಸೂಚಿಸಿದರು.

ನಗರದ ಜಿ.ಪಂ.ಸಭಾAಗಣದಲ್ಲಿ ನಡೆದ ೨೦೨೦-೨೧ ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಎಷ್ಟೋ ಕುಟುಂಬಗಳು ಇನ್ನೂ ಸಹ ಪಡಿತರ ಚೀಟಿ ಪಡೆದುಕೊಂಡಿಲ್ಲ. ಆದ್ದರಿಂದ ಬಿಪಿಎಲ್ ಪಡಿತರ ಚೀಟಿ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಆ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆ ಉಪ ನಿರ್ದೇಶಕರಿಗೆ ಜಿ.ಪಂ. ಅಧ್ಯಕ್ಷರು ಸ್ಪಷ್ಟ ನಿರ್ದೇಶನ ನೀಡಿದರು.

ಬಿಪಿಎಲ್ ಕುಟುಂಬಗಳಿಗೆ ಎಪಿಎಲ್ ಕಾರ್ಡ್ ದೊರೆತಿದ್ದು, ಈ ಬಗ್ಗೆ ಪರಿಶೀಲಿಸಿ ಬಿಪಿಎಲ್ ಕಾರ್ಡ್ ನೀಡಬೇಕು. ಯಾವುದೇ ಕಾರಣಕ್ಕೂ ವಿಳಂಬ ಧೋರಣೆ ಅನುಸರಿಸಬಾರದು ಎಂದು ಸೂಚಿಸಿದರು.

ಈ ಕುರಿತು ಮಾಹಿತಿ ನೀಡಿದ ಆಹಾರ ಇಲಾಖೆ ಶಿರಸ್ತೇದಾರ್, ಹೊಸದಾಗಿ ಬಿಪಿಎಲ್ ಪಡಿತರ ಚೀಟಿ ಪಡೆಯಲು ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆದರೆ ಹೊಸ ಪಡಿತರ ಚೀಟಿ ವಿತರಣೆಗೆ ಸರ್ಕಾರ ಅನುಮತಿ ನೀಡಬೇಕಿದೆ ಎಂದರು.

ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿ ಮಾತನಾಡಿದ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಹೊಸಮನೆ ಕವಿತಾ ಪ್ರಭಾಕರ್, ಅರ್ಹರಿಗೆ ಬಿಪಿಎಲ್ ಕಾರ್ಡ್ ಒದಗಿಸಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಧ್ವನಿಗೂಡಿಸಿದ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಎ.ಭವ್ಯ ಬಾಡಿಗೆ ಮನೆಯಲ್ಲಿ ವಾಸಿಸುವವರಿಗೂ ಸಹ ಎಪಿಎಲ್ ಕಾರ್ಡ್ ನೀಡಲಾಗಿದೆ ಎಂದು ಆಕ್ಷೇಪಿಸಿದರು.

ಸೌಭಾಗ್ಯ ಯೋಜನೆಯಡಿ ಪ್ರತೀ ಕುಟುಂಬಕ್ಕೂ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಹಿಂದಿನಿAದಲೂ ಹೇಳಿಕೊಂಡು ಬರಲಾಗಿದೆ. ಆದರೆ ಇದುವರೆಗೆ ಪರಿಪೂರ್ಣವಾಗಿಲ್ಲ ಎಂದು ಜಿ.ಪಂ.ಅಧ್ಯಕ್ಷರು ಬೇಸರ ವ್ಯಕ್ತಪಡಿಸಿದರು. ಇನ್ನು ಒಂದು ತಿಂಗಳಲ್ಲಿ ಮಳೆಗಾಲ ಆರಂಭವಾಗುವುದರಿAದ ಸೌಭಾಗ್ಯ ಯೋಜನೆಯನ್ನು ತ್ವರಿತಗತಿಯಲ್ಲಿ ನೀಡುವಂತೆ ಬಿ.ಎ.ಹರೀಶ್ ಹೇಳಿದರು.

ಮಳೆಗಾಲದ ಅವಧಿಯಲ್ಲಿ ಕುಶಾಲನಗರದ ಕೆಲವು ಬಡಾವಣೆಗಳು ಪ್ರವಾಹದಿಂದ ಸಂಕಷ್ಟ ಎದುರಿಸುವಂತಾಗುತ್ತದೆ. ಆದ್ದರಿಂದ ಇಲ್ಲಿ ಮರಳು ತೆಗೆಯಲು ಅವಕಾಶ ಮಾಡಬೇಕು ಎಂದು ಜಿ.ಪಂ.ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷೆ ಕೆ.ಆರ್.ಮಂಜುಳ ಗಮನ ಸೆಳೆದರು.

ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಅವರು ಮರಳು ಸಂಬAಧ ತಕ್ಷಣವೇ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಸಭೆ ಆಹ್ವಾನಿಸಲು ಮನವಿ ಮಾಡುವಂತೆ ಜಿಲ್ಲಾ ಭೂ ವಿಜ್ಞಾನಿ ಇಲಾಖೆ ಅಧಿಕಾರಿಗೆ ಸಲಹೆ ನೀಡಿದರು.

ಈ ಬಗ್ಗೆ ಮಾಹಿತಿ ನೀಡಿದ ಹಿರಿಯ ಭೂ ವಿಜ್ಞಾನಿ ಶ್ರೀನಿವಾಸ್ ಅವರು ಜಿಲ್ಲೆಯಲ್ಲಿ ಪ್ರವಾಹದಿಂದ ಬಂದು ಸಂಗ್ರಹವಾದ ಮರಳನ್ನು ತೆಗೆಯಲು ಅವಕಾಶವಿದೆ. ಈ ಸಂಬAಧ ೩೫ ಅರ್ಜಿಗಳು ಸ್ವೀಕೃತವಾಗಿದ್ದು, ೨೭ ಅರ್ಜಿಗಳಿಗೆ ಮರಳು ವಿಲೇವಾರಿಗೆ ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಡಿಡಿಪಿಐ ಪಿ.ಎಸ್.ಮಚ್ಚಾಡೋ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಉತ್ತಮ ಪಡಿಸುವ ನಿಟ್ಟಿನಲ್ಲಿ ಈಗಾಗಲೇ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.

ಜಿ.ಪಂ.ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಮಾತನಾಡಿ, ಸೂರ್ಲಬ್ಬಿ ಶಾಲೆಯಲ್ಲಿ ೪ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಶಿಕ್ಷಕರಿಲ್ಲದೆ ಪರದಾಡುವಂತಾಗಿದೆ. ಆದ್ದರಿಂದ ಮಾದಾಪುರ ವಸತಿ ಶಾಲೆಗೆ ಸೇರ್ಪಡೆ ಮಾಡಲು ಕ್ರಮಕೈಗೊಳ್ಳುವಂತೆ ಸಲಹೆ ಮಾಡಿದರು.

ಕುಶಾಲನಗರ ಬಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೮೮ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ವಿದ್ಯಾರ್ಥಿಗಳನ್ನು ಯಾವುದೇ ಕಾರಣಕ್ಕೂ ಸ್ಥಳಾಂತರ ಮಾಡಬಾರದು ಎಂದು ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷೆ ಕೆ.ಆರ್.ಮಂಜುಳಾ ಮನವಿ ಮಾಡಿದರು.

ಸಮಾಜ ಕಲ್ಯಾಣ ಇಲಾಖೆ, ಐಟಿಡಿಪಿ, ಬಿಸಿಎಂ ಇಲಾಖೆ ವ್ಯಾಪ್ತಿಯ ಹಾಸ್ಟ್ಲ್‌ಗಳಲ್ಲಿ ಶುಚಿತ್ವ ಕಾಪಾಡಬೇಕು. ಗುಣಮಟ್ಟದ ಆಹಾರ ಪೂರೈಸುವಂತೆ ಜಿ.ಪಂ. ಅಧ್ಯಕ್ಷ ಬಿ.ಎ.ಹರೀಶ್ ಸೂಚಿಸಿದರು. ಕುಶಾಲನಗರದ ಬಿಸಿಎಂ ಇಲಾಖೆಯ ವಿದ್ಯಾರ್ಥಿ ನಿಲಯದಲ್ಲಿ ಸಮರ್ಪಕವಾಗಿ ಆಹಾರ ಪೂರೈಸುತ್ತಿಲ್ಲ. ವಿದ್ಯಾರ್ಥಿ ನಿಲಯದಲ್ಲಿ ಅಗತ್ಯ ಮೂಲ ಸೌಲಭ್ಯವಿಲ್ಲದೆ ಪರಿತಪಿಸುತ್ತಿದ್ದಾರೆ ಎಂದು ಕೆ.ಆರ್.ಮಂಜುಳಾ ಅವರು ಅತೃಪ್ತಿ ವ್ಯಕ್ತಪಡಿಸಿದರು.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಅವರು ಜಿಲ್ಲೆಯಲ್ಲಿ ೧೩೩ ಕಡೆಗಳಲ್ಲಿ ಸ್ಮಶಾನ ಭೂಮಿ ಒದಗಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು. ಕೃಷಿ, ತೋಟಗಾರಿಕೆ, ಪಶುಪಾಲನೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತಿತರ ಇಲಾಖೆಗಳ ಪ್ರಗತಿ ಸಂಬAಧ ಅಧ್ಯಕ್ಷರು ಮಾಹಿತಿ ಪಡೆದರು. ಇಲಾಖೆ ಕಾರ್ಯಕ್ರಮಗಳನ್ನು ಮತ್ತಷ್ಟು ಅನುಷ್ಠಾನಗೊಳಿಸುವಂತೆ ಅವರು ಸೂಚಿಸಿದರು.