ಸೋಮವಾರಪೇಟೆ, ಏ. ೨೭: ಕೊರೊನಾ ವೈರಸ್ ವೇಗವಾಗಿ ಹಬ್ಬುತ್ತಿರುವ ಹಿನ್ನೆಲೆ ಸೋಮವಾರಪೇಟೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸದ್ಯದ ಮಟ್ಟಿಗೆ ೩೦ ಬೆಡ್‌ಗಳ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ.

ಶಾಸಕ ಅಪ್ಪಚ್ಚುರಂಜನ್ ಅವರ ಸೂಚನೆಯಂತೆ ಸರ್ಕಾರಿ ಆಸ್ಪತ್ರೆಯಲ್ಲಿ ಕೇರ್ ಸೆಂಟರ್ ಸ್ಥಾಪಿಸಲಾಗಿದ್ದು, ಸದ್ಯಕ್ಕೆ ೩೦ ಬೆಡ್‌ಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ೭೦ ಬೆಡ್‌ಗಳನ್ನು ಅಳವಡಿಸಲಾಗುವುದು ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಕೇರ್‌ಸೆಂಟರ್‌ಗೆ ರಂಜನ್ ಭೇಟಿ: ಸರ್ಕಾರಿ ಆಸ್ಪತ್ರೆಯಲ್ಲಿ ತೆರೆಯಲಾಗಿರುವ ಕೋವಿಡ್ ಕೇರ್ ಸೆಂಟರ್‌ಗೆ ಶಾಸಕ ಅಪ್ಪಚ್ಚು ರಂಜನ್ ಭೇಟಿ ನೀಡಿ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಸದ್ಯಕ್ಕೆ ಓರ್ವ ಕೊರೊನಾ ಸೋಂಕಿತ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆ ಪಿಪಿಇ ಕಿಟ್ ಬಳಸಿ ಸೆಂಟರ್‌ಗೆ ತೆರಳಿದ ಶಾಸಕರು, ಸೋಂಕಿತನೊAದಿಗೆ ಖುದ್ದು ಮಾತುಕತೆ ನಡೆಸಿ, ಆರೋಗ್ಯ ವಿಚಾರಿಸಿದರು.

ನಂತರ ಮಾತನಾಡಿದ ರಂಜನ್, ಕೋವಿಡ್ ನಿಯಂತ್ರಣ ಹಾಗೂ ಚಿಕಿತ್ಸೆಯಲ್ಲಿ ವೈದ್ಯರು, ದಾದಿಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹೆಚ್ಚು ಶ್ರಮ ವಹಿಸುತ್ತಿದ್ದಾರೆ. ಸೋಮವಾರಪೇಟೆಯ ಕೋವಿಡ್ ಕೇರ್ ಸೆಂಟರ್‌ನಲ್ಲಿ ಉತ್ತಮ ವ್ಯವಸ್ಥೆ ಕಲ್ಪಿಸಲಾಗಿದೆ. ಸಣ್ಣಪುಟ್ಟ ಲೋಪಗಳನ್ನೇ ದೊಡ್ಡದಾಗಿ ಬಿಂಬಿಸಿ, ಕೊರೊನಾ ವಾರಿಯರ್ಸ್ಗಳ ಆತ್ಮಸ್ಥೆöÊರ್ಯವನ್ನು ಕುಗ್ಗಿಸುವ ಪ್ರಯತ್ನ ನಡೆಸಬಾರದು. ಸಾರ್ವಜನಿಕರು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.

ಸದ್ಯಕ್ಕೆ ಪಟ್ಟಣದಲ್ಲಿ ೩೦ ಬೆಡ್‌ಗಳ ಕೇರ್‌ಸೆಂಟರ್ ತೆರೆಯಲಾಗಿದೆ. ಮುಂದಿನ ದಿನಗಳಲ್ಲಿ ಬೆಡ್‌ಗಳ ಸಂಖ್ಯೆ ಹೆಚ್ಚಿಸಲಾಗುವುದು. ಈಗಿರುವ ಹೊರ ರೋಗಿಗಳ ವಿಭಾಗವನ್ನು ಸಂಪೂರ್ಣವಾಗಿ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಿ, ಪಿಪಿಸಿ ಬ್ಲಾಕ್‌ನ್ನು ಸಾಮಾನ್ಯ ರೋಗಿಗಳ ಚಿಕಿತ್ಸೆಗೆ ಬಳಸಿಕೊಳ್ಳುವ ಬಗ್ಗೆ ಚಿಂತನೆ ಹರಿಸಲಾಗುತ್ತಿದೆ ಎಂದರು. ಈ ಸಂದರ್ಭ ವೈದ್ಯರುಗಳಾದ ಶಿವಪ್ರಸಾದ್, ಸತೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.