ವೀರಾಜಪೇಟೆ, ಏ. ೨೮: ರಾಜ್ಯ ಸರ್ಕಾರವು ಹೊರಡಿಸಿದ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿ ರುವವರ ವಿರುದ್ಧ ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಗೆ ಎರಡು ಪ್ರಕರಣಗಳು ದಾಖಲಾಗಿವೆ.
ತಾ. ೨೫ರ ಭಾನುವಾರ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿದ್ದ ಸಂದರ್ಭ ನಿಯಮ ಉಲ್ಲಂಘಿಸಿದವರ ಮೇಲೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ೨ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ತೋಮರ ಗ್ರಾಮದ ಕುಪ್ಪೆ ಬೆಟ್ಟದ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಸುಮಾರು
(ಮೊದಲ ಪುಟದಿಂದ) ೩೦ ಮಂದಿ ಸಾರ್ವಜನಿಕರು ಸೇರಿದಂತೆ ಆಡಳಿತ ಮಂಡಳಿಯ ಸದಸ್ಯರು ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸದೆ ಪೂಜಾ ಕಾರ್ಯಕ್ರಮದಲ್ಲಿ ತೊಡಗಿದ್ದರು ಎಂಬ ಖಚಿತವಾದ ಮಾಹಿತಿ ಅನ್ವಯ ದೇವಾಲಯಕ್ಕೆ ಆಗಮಿಸಿ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಕೆ.ಕೆ. ಪೂವಯ್ಯ ಮತ್ತು ಸದಸ್ಯರ ಮೇಲೆ ಪ್ರಕರಣ ದಾಖಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ತೋಮರ ಗ್ರಾಮದ ಮಾಯಿಲ ಮಕ್ಕಿ ಎಂಬಲ್ಲಿ ಮನೆಯೊಂದರ ಅಂಗಳದಲ್ಲಿ ಮನೆಯ ಮಾಲೀಕರೊಂದಿಗೆ ಸ್ನೇಹಿತರು ಜೊತೆಗೂಡಿ ಮೋಜು ಮಸ್ತಿಯಲ್ಲಿ ತೊಡಗಿದ್ದರು. ಮಾಹಿತಿ ಬಂದ ಹಿನ್ನೆಲೆಯಲ್ಲಿ ವೀರಾಜಪೇಟೆ ಗ್ರಾಮಾಂತರ ಪೊಲೀಸರು ಧಾಳಿ ನಡೆಸಿದ್ದಾರೆ. ಕೋವಿಡ್ ನಿಯಮಗಳನ್ನು ಪಾಲಿಸದೇ, ಸಾಮಾಜಿಕ ಅಂತರ ಕಾಪಾಡದೇ ವಿಪತ್ತು ನಿರ್ವಹಣಾ ಕಾಯ್ದೆಯನ್ನು ಉಲ್ಲಂಘನೆ ಮಾಡಿರುವುದು ಸಾಬೀತಾದ ಹಿನ್ನೆಲೆಯಲ್ಲಿ ವೀರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಮನೆಯ ಮಾಲೀಕ ರಶೀದ್ ಮತ್ತು ಇತರೆ ೮ ಮಂದಿಯ ಮೇಲೆ ೨೬೯ ಐ.ಪಿ.ಸಿ ೫೩ (ಬಿ) ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ.
ವೀರಾಜಪೇಟೆ ಗ್ರಾಮಾಂತರ ಠಾಣೆಯ ಪ್ರಭಾರ ಪಿ.ಎಸ್.ಐ. ಹೆಚ್.ಎಸ್. ಬೋಜಪ್ಪ, ಅವರ ನೇತೃತ್ವದಲ್ಲಿ ಗ್ರಾಮಾಂತರ ಠಾಣೆಯ ಎ.ಎಸ್.ಐ. ಶ್ರೀಧರ್ ಮತ್ತು ಸಿಬ್ಬಂದಿಗಳಾದ ತೀರ್ಥಕುಮಾರ್, ನೆಹರು ಕುಮಾರ್, ಮತ್ತು ಹರೀಶ್ ಅವರುಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದರು. -ಕೆ.ಕೆ.ಎಸ್.