ಬೆಂಗಳೂರು, ಮೇ ೩: ಕೊಡಗು ಜಿಲ್ಲೆಯ ಆಸ್ಪತ್ರೆಗಳಲ್ಲಿ ಕೊರತೆಯಾಗದಂತೆ ಅವಶ್ಯವಾದಷ್ಟು ಆಮ್ಲಜನಕ ದಾಸ್ತಾನು ಮಾಡಿಕೊಳ್ಳಬೇಕೆಂದು ವಸತಿ ಸಚಿವರೂ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಾದ ಸೂಚನೆ ನೀಡಿದ್ದಾರೆ.

ಕೋವಿಡ್-೧೯ ಸೋಂಕಿತರ ಚಿಕಿತ್ಸೆ ಹಾಗೂ ಕೋವಿಡ್ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವುದರ ಕುರಿತಂತೆ ಇಂದು ಕೊಡಗು ಜಿಲ್ಲೆಯ ಶಾಸಕರು, ವಿಧಾನಪರಿಷತ್ ಸದಸ್ಯರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಗೂ ಇನ್ನಿತರ ಅಧಿಕಾರಿಗಳೊಂದಿಗೆ ಬೆಂಗಳೂರಿನ ವಿಕಾಸಸೌಧದಿಂದ ವೀಡಿಯೋ ಸಂವಾದ ನಡೆಸಿದರು.

ಆಮ್ಲಜನಕ ಕೊರತೆಯಾಗದಂತೆ ಎಲ್ಲಾ ಕ್ರಮ ಕೈಗೊಳ್ಳಬೇಕು ಹಾಗೂ ಪರಿಸ್ಥಿತಿಯನ್ನು ಆಗಿಂದಾಗ್ಗೆ ಅವಲೋಕಿಸುತ್ತಾ ತಮಗೆ ವರದಿ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ ಸಚಿವರು; ಜಿಲ್ಲೆಯಲ್ಲಿ ಸೋಂಕು ಹರಡದಂತೆ ಬಿಗಿ ಕ್ರಮಗಳನ್ನು ಜಾರಿಗೊಳಿಸಲು ಸೂಚನೆ ನೀಡಿದರು.