ಸೋಮವಾರಪೇಟೆ, ಮೇ ೮: ಪಟ್ಟಣವನ್ನು ಸ್ವಚ್ಛಗೊಳಿಸುವ ಕಾಯಕದಲ್ಲಿ ತೊಡಗಿಸಿಕೊಂಡಿರುವ ಪೌರ ಕಾರ್ಮಿಕರಿಗೆ ಪ.ಪಂ. ವತಿಯಿಂದ ವಿವಿಧ ಪರಿಕರಗಳನ್ನು ವಿತರಿಸಲಾಯಿತು.

ಕೊರೊನಾ ಸಾಂಕ್ರಾಮಿಕ ರೋಗ ತಡೆಗೆ ಬಳಸಲ್ಪಡುವ ಮಾಸ್ಕ್, ಫೇಸ್‌ಸೀಲ್ಡ್, ಸ್ಯಾನಿಟೈಸರ್ ಸೇರಿದಂತೆ ಇನ್ನಿತರ ಪರಿಕರಗಳನ್ನು ವಿತರಿಸಿ ಮಾತನಾಡಿದ ಪ.ಪಂ. ಅಧ್ಯಕ್ಷೆ ನಳಿನಿ ಗಣೇಶ್, ಸಂಕಷ್ಟದ ದಿನಗಳಲ್ಲಿ ಪಟ್ಟಣವನ್ನು ಸ್ವಚ್ಛಗೊಳಿಸಿ ಆರೋಗ್ಯ ಕಾಪಾಡುವಲ್ಲಿ ತಮ್ಮ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರ ಆರೋಗ್ಯ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಅಭಿಪ್ರಾಯಿಸಿದರು.

ಕಾರ್ಮಿಕರು ತಮ್ಮ ಕರ್ತವ್ಯದ ಜೊತೆಗೆ ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಅಲ್ಲದೆ ತಮ್ಮ ಆರೋಗ್ಯದ ಬಗ್ಗೆಯೂ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಮನವಿ ಮಾಡಿದರು. ಈ ಸಂದರ್ಭ ಉಪಾಧ್ಯಕ್ಷ ಬಿ. ಸಂಜೀವ, ಮುಖ್ಯಾಧಿಕಾರಿ ನಾಚಪ್ಪ ಉಪಸ್ಥಿತರಿದ್ದರು.