ಸೋಮವಾರಪೇಟೆ, ಮೇ 9: ದಿನದಿಂದ ದಿನಕ್ಕೆ ಕೊರೊನಾ ವೈರಸ್ ವ್ಯಾಪಕವಾಗಿ ಹಬ್ಬುತ್ತಿದ್ದು, ಸೋಂಕಿತರ ಸಂಖ್ಯೆಯೂ ಹೆಚ್ಚುತ್ತಿದೆ. ಇಂತಹ ಸಂದಿಗ್ಧ ಸನ್ನಿವೇಶದಲ್ಲಿ ಜಿಲ್ಲೆಯಲ್ಲಿರುವ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್, ಔಷಧೋಪಚಾರದಲ್ಲಿ ಕೊರತೆಯಾಗದಂತೆ ಆಡಳಿತ ಯಂತ್ರ ಗಮನ ಹರಿಸಬೇಕೆಂದು ಜೆಡಿಎಸ್ ಜಿಲ್ಲಾ ವಕ್ತಾರ ಕಾಟ್ನಮನೆ ವಿಠಲ್‍ಗೌಡ ಮನವಿ ಮಾಡಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಹಲವು ಮಾರ್ಗಸೂಚಿಗಳನ್ನು ಪ್ರಕಟಿಸುತ್ತಿದ್ದು, ಸಾರ್ವಜನಿಕರು ನಿರ್ಲಕ್ಷ್ಯ ತೋರದೇ ಪಾಲಿಸಬೇಕು. ಮಾಸ್ಕ್, ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು. ರೋಗ ಲಕ್ಷಣಗಳಿದ್ದರೆ ವೈದ್ಯರನ್ನು ಭೇಟಿ ಮಾಡಬೇಕು. ರೋಗದ ಬಗ್ಗೆ ಯಾವುದೇ ನಿರ್ಲಕ್ಷ್ಯ ಮಾಡಬಾರದು ಎಂದು ಮನವಿ ಮಾಡಿದ್ದಾರೆ.

ಇಂತಹ ವಿಷಮ ಪರಿಸ್ಥಿತಿಯನ್ನು ರಾಜಕೀಯ ಪಕ್ಷಗಳು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳದೇ, ಸಾರ್ವಜನಿಕರ ಸೇವೆಗೆ ಇಳಿಯಬೇಕು ಎಂದು ಅಭಿಪ್ರಾಯಿಸಿರುವ ವಿಠಲ್ ಗೌಡ, ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರು ಕೋವಿಡ್ ಆಸ್ಪತ್ರೆ ಸೇರಿದಂತೆ ಕ್ಷೇತ್ರದ ಎಲ್ಲಾ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ರೋಗಿಗಳು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳಿಗೆ ಧೈರ್ಯ ತುಂಬುತ್ತಿರುವುದು ಶ್ಲಾಘನೀಯ ಎಂದಿದ್ದಾರೆ.