ಮಡಿಕೇರಿ, ಮೇ 10: ಕೋವಿಡ್-19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಯಾವುದೇ ರೀತಿಯಲ್ಲಿ ದಕ್ಕೆ ಬಾರದಂತೆ, ಮಂಗಳೂರು ವಿಶ್ವವಿದ್ಯಾನಿಲಯದ 211 ಕಾಲೇಜಿನ ಪ್ರಾಂಶುಪಾಲರ ಸಭೆಯನ್ನು ವಿಶ್ವವಿದ್ಯಾನಿಲಯದ ಕುಲಪತಿಗಳ ಅಧ್ಯಕ್ಷತೆಯಲ್ಲಿ ನಡೆಸಿ, ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿಗಳನ್ನು ನಡೆಸಲು ನಿರ್ಧರಿಸಲಾಗಿದ್ದು, ನೆಟ್ವರ್ಕ್ ಸಮಸ್ಯೆ ಇರುವವರಿಗೆ ತದನಂತರ ಭೌತಿಕ ತರಗತಿಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗಿದೆ. ಅದೇ ರೀತಿ ಬಾಕಿ ಉಳಿದಿರುವ 1ನೇ, 3ನೇ ಮತ್ತು 5ನೇ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದಿನ ದಿನಗಳಲ್ಲಿ ಭೌತಿಕವಾಗಿಯೇ ನಡೆಸಲಾಗುವುದು ಹಾಗೂ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿಗಾಗಿ ಒಂದು ವಾರದ ಸಮಯಾವಕಾಶವನ್ನು ಕೂಡಾ ನೀಡಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಯಾವುದೇ ರೀತಿಯಲ್ಲಿ ಆತಂಕ ಪಡುವ ಅಗತ್ಯವಿಲ್ಲವೆಂದು ವಿಶ್ವವಿದ್ಯಾನಿಲಯದ ಕುಲಸಚಿವರು ತಿಳಿಸಿದ್ದಾರೆ.