ಮಡಿಕೇರಿ, ಮೇ 10: ಕೋವಿಡ್ ಸಂದಿಗ್ಧ ಪರಿಸ್ಥಿತಿಯಿಂದ ಕೊಡಗು ಜಿಲ್ಲೆ ಆತಂಕದ ದಿನಗಳನ್ನು ಎದುರಿಸುತ್ತಿರುವ ಈ ದಿನಗಳಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಒಗ್ಗಟ್ಟಾಗಿ ಕಾರ್ಯನಿರ್ವಹಿಸುವ ಅನಿವಾರ್ಯತೆ ಇದೆ. ಆದರೆ ಜಿಲ್ಲೆಯ ಅಧಿಕಾರಿಗಳು ಜನಪ್ರತಿನಿಧಿಗಳನ್ನು ಕಡೆಗಣಿಸಿ ತಮಗಿಷ್ಟ ಬಂದಂತೆ ನಿಯಮಗಳನ್ನು ರೂಪಿಸಿ ಜನಸಾಮಾನ್ಯರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ ಅವರು ಆರೋಪಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೋವಿಡ್ನ ಎರಡನೇ ಅಲೆ ವ್ಯಾಪಿಸುವ ಬಗ್ಗೆ ಮುನ್ಸೂಚನೆ ಇದ್ದರೂ ಸರ್ಕಾರ ತೋರಿದ ನಿರ್ಲಕ್ಷ್ಯದಿಂದ ಇಂದು ರಾಜ್ಯ ಗಂಭೀರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಸರ್ಕಾರ ಮಾಡಿದ ತಪ್ಪಿಗೆ ಜನರು ಸಂಕಷ್ಟವನ್ನು ಎದುರಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಈಗ ಹದಗೆಟ್ಟಿರುವ ಪರಿಸ್ಥಿತಿಯನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಸ್ವಪ್ರತಿಷ್ಠೆಯನ್ನು ಬದಿಗಿಟ್ಟು ಶ್ರಮಿಸಬೇಕಾಗಿದೆ. ಆದರೆ ಕೊಡಗು ಜಿಲ್ಲೆಯಲ್ಲಿ ಅಧಿಕಾರಿಗಳು ರೂಪಿಸಿದ್ದೇ ಕಾನೂನು ಎಂಬಂತಾಗಿದೆ. ಜನಪ್ರತಿನಿಧಿಗಳನ್ನು ಮತ್ತು ಜವಬ್ದಾರಿಯುತ ಸ್ಥಾನದಲ್ಲಿರುವ ಸಂಘ, ಸಂಸ್ಥೆಗಳನ್ನು ಗಣನೆಗೆ ತೆಗೆದುಕೊಳ್ಳದೆ ಇಲ್ಲಿನ ಭೌಗೋಳಿಕ ಸ್ಥಿತಿಗೆ ವಿರುದ್ಧವಾದ ನಿಯಮಗಳನ್ನು ಹೇರಲಾಗುತ್ತಿದೆ. ಕೋವಿಡ್ ಸೋಂಕಿನ ಆತಂಕವನ್ನು ಎದುರಿಸುತ್ತಿರುವ ಜನ ಅಗತ್ಯ ವಸ್ತುಗಳು ಸಿಗದೇ ಹೋಗಬಹುದು ಎನ್ನುವ ಗೊಂದಲದಲ್ಲೂ ಇದ್ದಾರೆ. ದಿನಕ್ಕೊಂದು ನಿಯಮಗಳನ್ನು ಜಾರಿಗೆ ತರುತ್ತಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಕಳೆದ ವರ್ಷ ಜಿಲ್ಲಾಡಳಿತ ಜನಪ್ರತಿನಿಧಿಗಳ ಸಲಹೆಯನ್ನು ಪಡೆದುಕೊಂಡೇ ಕೋವಿಡ್ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಿದೆ. ಆದರೆ ಪ್ರಸ್ತುತ ವರ್ಷ ಸಂಪೂರ್ಣ ವಿಫಲತೆಯನ್ನು ಕಾಣುತ್ತಿದೆ ಎಂದು ಆರೋಪಿಸಿದ್ದಾರೆ.
ಯಾವುದೇ ವಾಹನಗಳ ಸಂಚಾರಕ್ಕೆ ಅವಕಾಶ ನೀಡದೆ ಇರುವುದರಿಂದ ಜನರು ಹತ್ತಾರು ಕಿ.ಮೀ. ದೂರದವರೆಗೆ ಕಾಲ್ನಡಿಗೆಯಲ್ಲೇ ಸಾಗುವಂತೆ ಮಾಡಿದೆ. ಇದರಿಂದ ವಯೋವೃದ್ಧರು, ಮಹಿಳೆಯರು ಭಾರದ ವಸ್ತುಗಳನ್ನು ಕೊಂಡೊಯ್ಯಲು ಸಾಧ್ಯವಾಗದೆ ಕಷ್ಟಪಡುವಂತಹ ಪರಿಸ್ಥಿತಿ ನಿರ್ಮಾಣವಾಯಿತು.
ಕೊಡಗಿನ ಭೌಗೋಳಿಕ ಸ್ಥಿತಿಗತಿ ವಿಭಿನ್ನವಾಗಿದ್ದು, ಬೇರೆ ಜಿಲ್ಲೆಯ ನಿಯಮವನ್ನೇ ಇಲ್ಲಿಯೂ ಜಾರಿಗೆ ತರುವುದು ಸರಿಯಾದ ಕ್ರಮವಲ್ಲವೆಂದು ಅಭಿಪ್ರಾಯಪಟ್ಟಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳು ಹೇಳಿದಂತೆ ಕೇಳುವುದನ್ನು ಬಿಟ್ಟು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರಮುಖರೊಂದಿಗೆ ಮೊದಲು ಸಭೆ ನಡೆಸಲಿ, ನಂತರ ಅಧಿಕಾರಿಗಳೊಂದಿಗೆ ಚರ್ಚಿಸಲಿ ಎಂದು ಅವರು ಒತ್ತಾಯಿಸಿದ್ದಾರೆ.
ಅಗತ್ಯ ವಸ್ತುಗಳ ಖರೀದಿಗೆ ವಾರದಲ್ಲಿ ಕೇವಲ ಎರಡು ದಿನಗಳನ್ನು ಮಾತ್ರ ಸೀಮಿತಗೊಳಿಸಿರುವುದರಿಂದ ಜನಜಂಗುಳಿ ಉಂಟಾಗುತ್ತಿದೆ. ಅಲ್ಲದೆ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿರುವುದರಿಂದ ಗ್ರಾಮೀಣ ಜನರಿಗೆ ವಸ್ತುಗಳನ್ನು ತೆಗೆದುಕೊಂಡು ಹೋಗಲು ಸಾಧ್ಯವೇ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ವಸ್ತುಗಳ ಖರೀದಿಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರ 3 ದಿನಗಳ ಅವಕಾಶ ಕಲ್ಪಿಸಬೇಕು ಹಾಗೂ ಈ ದಿನಗಳಲ್ಲಿ ವಾಹನಗಳ ಸಂಚಾರಕ್ಕೆ ಅನುಮತಿ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.