ಮಡಿಕೇರಿ, ಮೇ ೨೫: ಪ್ರಸ್ತುತ ಎದುರಾಗಿರುವ ಕೋವಿಡ್-೧೯ ಅಲೆ ನಿಯಂತ್ರಿಸಲು ಹಾಗೂ ಮುಂಬರ ಲಿರುವ ಕೋವಿಡ್ ೩ನೇ ಅಲೆಯನ್ನು ಎದುರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವುದರೊಂದಿಗೆ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಕೋವಿಡ್ ಕೇರ್ ಸೆಂಟರ್ ಸಿದ್ಧಪಡಿಸಿ ಕೊಳ್ಳಲು ತೀರ್ಮಾನ ಕೈಗೊಳ್ಳಲಾಗಿದೆ.
ಮಡಿಕೇರಿ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಯಾಗಿರುವ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಶಬನಾಶೇಖ್ ಅವರ ಅಧ್ಯಕ್ಷತೆಯಲ್ಲಿಂದು ನಡೆದ ತಾ.ಪಂ. ವಿಶೇಷ ಸಾಮಾನ್ಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈಗ ಎದುರಾಗಿರುವ ಕೋವಿಡ್ ಅಲೆಯನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಎಲ್ಲ ಇಲಾಖಾ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕಿದೆ. ಅಲ್ಲದೆ ಮುಂದೆ ಬರಲಿರುವ ಕೋವಿಡ್ ಮೂರನೇ ಅಲೆಯನ್ನು ಎದುರಿಸುವ ನಿಟ್ಟಿನಲ್ಲಿ ಈಗಿನಿಂದಲೇ ಜಾಗರೂಕತೆ ವಹಿಸಬೇಕಾಗಿದ್ದು, ಅಗತ್ಯ ಸಿದ್ಧತೆಗಳನ್ನು ಮಾಡಬೇಕಾಗಿದೆ.
ಪ್ರತಿ ಗ್ರಾ.ಪಂ. ಮಟ್ಟದಲ್ಲಿ ಕನಿಷ್ಟ ೨೦ ಹಾಸಿಗೆಗಳ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್ಗಳನ್ನು ಸಿದ್ಧಪಡಿಸಿಕೊಳ್ಳಬೇಕಾಗಿದೆ. ಶಿಕ್ಷಣ, ಸಮಾಜಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಗಳ ಇಲಾಖಾ ಸಹಯೋಗದೊಂದಿಗೆ ಈ ಕೆಲಸ ಗಳಾಗಬೇಕಿದೆ ಎಂದು ಆಡಳಿತಾಧಿಕಾರಿ ಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೆ ೨೦೨೧-೨೨ನೇ ಸಾಲಿನ ವಿವಿಧ ಕಾಮಗಾರಿಗಳಿಗೆ ಕ್ರಿಯಾಯೋಜನೆ ಸಿದ್ಧಪಡಿಸಲು ಅನುಮತಿ ನೀಡಲಾಗಿದ್ದು, ಮುಂದಿನ ಏಳು ದಿನಗಳೊಳಗಡೆ ಯೋಜನೆ ತಯಾರಿಸಿ ಸಲ್ಲಿಸುವಂತೆ ಅವರು ಸೂಚನೆ ನೀಡಿದರು. ಸಭೆಯಲ್ಲಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಶೇಖರ್, ವಿವಿಧ ಇಲಾಖಾಧಿಕಾರಿಗಳು ಪಾಲ್ಗೊಂಡಿದ್ದರು.