ಶ್ರೀಮಂಗಲ, ಮೇ ೨೭: ರಾಜ್ಯ ಸರ್ಕಾರವು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳನ್ನು ಮತ್ತು ಅಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರು ಹಾಗೂ ಇತರ ಸಿಬ್ಬಂದಿ ವರ್ಗದವರನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ ಎಂದು ಕೊಡಗು ಜಿಲ್ಲಾ ಅನುದಾನ ರಹಿತ ಶಾಲೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೋಟ್ರಂಗಡ ತಿಮ್ಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸರ್ಕಾರವು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳಿಗೆ ಕೂಡಲೇ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಬೇಕು. ಅವರ ಕುಟುಂಬಗಳಿಗೆ ನೆರವಾಗಬೇಕು ಎಂದು ಮನವಿ ಮಾಡಿದ್ದಾರೆ.

ಶಿಕ್ಷಣ ಸಚಿವರು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ಅಲ್ಲದೆ ಶಿಕ್ಷಕರ ಕ್ಷೇತ್ರದಿಂದ ಚುನಾಯಿತರಾದ ಎಂಎಲ್ಸಿಗಳು ಕೂಡ ರಾಜೀನಾಮೆ ಕೊಟ್ಟು ನಮ್ಮ ಬೆಂಬಲ ನೀಡಬೇಕಾಗಿ ಕೋರುತ್ತೇವೆ.

ಕಳೆದ ವರ್ಷದ ಅರ್.ಟಿ.ಇ. ಮರುಪಾವತಿ ಹಣ ಇನ್ನೂ ಬಂದಿಲ್ಲ. ಇದರಿಂದ ಶಿಕ್ಷಣ ಸಂಸ್ಥೆಗಳಿಗೆ ತುಂಬಾ ತೊಂದರೆಯಾಗಿದೆ. ಪಾಲಕರಿಂದಲೂ ಯಾವುದೇ ಶುಲ್ಕ ಬರುತ್ತಿಲ್ಲ. ಇದರಿಂದ ಶಿಕ್ಷಣ ಸಂಸ್ಥೆಗಳು ಬಾಗಿಲು ಮುಚ್ಚುವ ಪರಿಸ್ಥಿತಿಗೆ ಬಂದಿವೆ. ತಕ್ಷಣವೇ ಆರ್.ಟಿ.ಇ. ಮರುಪಾವತಿ ಹಣವನ್ನು ಶಿಕ್ಷಣ ಸಂಸ್ಥೆಗಳಿಗೆ ಬಿಡುಗಡೆ ಮಾಡಬೇಕೆಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.