ಸೋಮವಾರಪೇಟೆ, ಮೇ ೨೭: ಕೊರೊನಾ ನಿಗ್ರಹಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಬಿಗಿ ನಿಲುವುಗಳನ್ನು ಕೈಗೊಳ್ಳುತ್ತಿದ್ದು ಸ್ಥಳೀಯವಾಗಿ ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಮೂಲಕ ಕೊರೊನಾ ಮುಕ್ತ ಗ್ರಾ.ಪಂ.ಗಳನ್ನಾಗಿ ಮಾಡಲು ಕ್ರಮ ಕೈಗೊಳ್ಳಿ ಎಂದು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸ್ಥಳೀಯ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜೀವ ಇದ್ದರೆ ಮಾತ್ರ ಜೀವನ ಎಂಬುದನ್ನು ಗಮನದಲ್ಲಿರಿಸಿಕೊಂಡು ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ ಎಂದು ನಿರ್ದೇಶನ ನೀಡಿದರು.
ಕೊರೊನಾ ಎರಡನೇ ಅಲೆಯ ತೀವ್ರತೆ ಹೆಚ್ಚಾಗಿದ್ದು ಹಲವು ಮಂದಿ ಜೀವ ಕಳೆದುಕೊಂಡಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲೂ ಸೋಂಕು ಹೆಚ್ಚಾಗಿ ಹರಡುತ್ತಿದೆ. ಇಂತಹ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ, ಆರೋಗ್ಯ ಇಲಾಖೆ, ಟಾಸ್ಕ್ಫೋರ್ಸ್ ಸಮಿತಿಗಳು ಸಮರ್ಪಕವಾಗಿ ಕರ್ತವ್ಯ ನಿರ್ವಹಿಸಬೇಕಾಗಿದೆ ಎಂದರು.
ಕೊರೊನಾ ಹತೋಟಿಗೆ ತರಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಇನ್ನಿಲ್ಲದ ಪ್ರಯತ್ನ ಮಾಡುತ್ತಿವೆ. ಆದರೆ ಜನರ ಸಹಕಾರವಿಲ್ಲದಿದ್ದರೆ ಎಲ್ಲವೂ ವ್ಯರ್ಥವಾಗಲಿದೆ. ಸರ್ಕಾರ ಪ್ರತಿಯೊಬ್ಬರ ಆರೋಗ್ಯವನ್ನು ಕಾಪಾಡುವ ದೃಷ್ಟಿಯಿಂದ ‘ವೈದ್ಯರ ನಡೆ ಹಳ್ಳಿಯ ಕಡೆ’ ಎಂಬ ಕಾರ್ಯಕ್ರಮ ಜಾರಿಗೊಳಿಸಿದೆ. ಪಂಚಾಯಿತಿ ಅಧಿಕಾರಿಗಳು, ಆರೋಗ್ಯ ಕಾರ್ಯಕರ್ತರು, ಟಾಸ್ಕ್ಫೋರ್ಸ್ ಸಮಿತಿ ಸದಸ್ಯರು ಮನೆಮನೆಗೆ ತೆರಳಿ ಪ್ರತಿಯೊಬ್ಬರ ಆರೋಗ್ಯ ಪರಿಶೀಲಿಸಿ ಅವರಿಗೆ ಮಾರ್ಗದರ್ಶನ ನೀಡಬೇಕು ಎಂದರು.
ಕೋವಿಡ್ ಸೋಂಕಿತರು ಅಥವಾ ಅವರ ಪ್ರಾಥಮಿಕ ಸಂಪರ್ಕದಲ್ಲಿ ರುವವರು ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುತ್ತಿದ್ದರೆ ಮುಲಾಜಿಲ್ಲದೆ ಪೊಲೀಸರಿಗೆ ದೂರು ಸಲ್ಲಿಸುವಂತೆ ಶಾಸಕರು ಸೂಚಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ತಹಶೀಲ್ದಾರ್ ಗೋವಿಂದರಾಜು ಮಾತನಾಡಿ, ಪ್ರತಿ ಗ್ರಾಮಗಳಲ್ಲೂ ಆರೋಗ್ಯ ತಪಾಸಣೆ ಆಗಬೇಕು. ಈಗಾಗಲೇ ಪಂಚಾಯಿತಿ ಮಟ್ಟದಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲು ಹಾಸ್ಟೆಲ್ ಹಾಗೂ ವಸತಿ ಶಾಲೆಗಳನ್ನು ಗುರುತಿಸಲಾಗಿದ್ದು ಸದ್ಯದಲ್ಲೇ ಮಾಹಿತಿ ನೀಡಲಾಗುವುದೆಂದರು.
ತಾಲೂಕು ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ್ ಮಾತನಾಡಿ, ಸರ್ಕಾರದ ಆದೇಶದಂತೆ ಆರೋಗ್ಯ ಇಲಾಖೆಯೊಂದಿಗೆ ಇತರ ಇಲಾಖೆಗಳು ಕೈಜೋಡಿಸಿ ಕೊರೊನಾ ಹೋಗಲಾಡಿಸಲು ಸಹಕರಿಸಬೇಕೆಂದು ಮನವಿ ಮಾಡಿದರು.
ಪೊಲೀಸ್ ವೃತ್ತ ನಿರೀಕ್ಷಕ ಬಿ.ಜಿ. ಮಹೇಶ್ ಮಾತನಾಡಿ, ಸೋಮವಾರ, ಬುಧವಾರ, ಶುಕ್ರವಾರಗಳಂದು ಪಟ್ಟಣದಲ್ಲಿ ಜನಸಂದಣಿ ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಿಸಲು ಇಲಾಖೆಗೆ ಕಷ್ಟವಾಗುತ್ತಿದೆ. ಆದ್ದರಿಂದ ಪಟ್ಟಣ ಪಂಚಾಯಿತಿ ವತಿಯಿಂದ ಕೈಗೊಳ್ಳಲಾಗಿರುವ ಸೂಚನೆಯ ಧ್ವನಿ ಮುದ್ರಿಕೆಯನ್ನು ಆಗಾಗ್ಗೆ ಪ್ರಚಾರ ಪಡಿಸಬೇಕೆಂದರು. ಠಾಣಾ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲೂ ಬೀಟ್ ವ್ಯವಸ್ಥೆ ಮಾಡಲಾಗಿದೆ. ಗ್ರಾಮೀಣ ಭಾಗಗಳಲ್ಲಿ ಲಾಕ್ಡೌನ್ ಸಂದರ್ಭಗಳಲ್ಲೂ ಮೈದಾನಗಳಲ್ಲಿ ಆಟವಾಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿದ್ದು, ಇವರುಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಜಯಣ್ಣ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಪಾಂಡು ಸೇರಿದಂತೆ ಇತರರು ಹಾಜರಿದ್ದರು.