ಮಡಿಕೇರಿ, ಮೇ ೨೭: ಕೊಡಗು ಜಿಲ್ಲೆಯಲ್ಲಿ ಕೋವಿಡ್ ೧೯ ಪ್ರಕರಣಗಳು ನಿಯಂತ್ರಣಕ್ಕೆ ಬರುತ್ತಿದ್ದು, ಜೂನ್ ೭ರ ನಂತರ ಲಾಕ್‌ಡೌನ್ ಮುಂದುವರೆಸಬೇಕೆ? ಅಥವಾ ಬೇಡವೇ? ಎಂಬ ಬಗ್ಗೆ ಇನ್ನೂ ೧೦ ದಿನಗಳ ಪರಿಸ್ಥಿತಿ ಅವಲೋಕಿಸಿ ನಿರ್ಧರಿಸಬಹುದಾಗಿದೆ ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಗರದ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.

ಕೋವಿಡ್ ೧೯ ನಿಯಂತ್ರಿಸಲು ಸಾಕಷ್ಟು ಶ್ರಮ ವಹಿಸಲಾಗುತ್ತಿದೆ. ಆ ದಿಸೆಯಲ್ಲಿ ಪರೀಕ್ಷೆಗೆ ಒಳಪಟ್ಟವರನ್ನು ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲು ಮಾಡುವುದು, ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಗುಣಪಡಿಸುವ ಕೆಲಸ ನಡೆಯುತ್ತಿದೆ ಎಂದು ಶಾಸಕರು ತಿಳಿಸಿದರು.

ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಮೊಬೈಲ್, ಸರ ಮತ್ತಿತರ ಕಳವು ಬಗ್ಗೆ ಮಾಹಿತಿ ನೀಡಿದ ಶಾಸಕರು ಗುಮ್ಮನಕೊಲ್ಲಿ ಗ್ರಾಮದ ಕೃತಿಕ ಕುಟುಂಬದವರ ಮೊಬೈಲ್ ಕಳವು ಸಂಬAಧ ಪೊಲೀಸ್ ಇಲಾಖೆಯಿಂದ ತನಿಖೆ ನಡೆಯುತ್ತಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಮೊಬೈಲ್ ಸೇರಿದಂತೆ ಅಗತ್ಯ ವಸ್ತುಗಳನ್ನು ನೋಡಿಕೊಳ್ಳುವತ್ತ ಗಮನಹರಿಸಲಾಗಿದೆ ಎಂದು ಎಂ.ಪಿ. ಅಪ್ಪಚ್ಚು ರಂಜನ್ ಅವರು ವಿವರಿಸಿದರು.

ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಆಗಾಗ ಭೇಟಿ ನೀಡಿ ಪರಿಶೀಲಿಸಲಾಗುತ್ತಿದೆ. ಆಸ್ಪತ್ರೆಯಲ್ಲಿ ಆಗಬೇಕಿರುವ ಕಾರ್ಯಗಳು ಹಾಗೂ ಸೋಂಕಿತರ ಯೋಗಕ್ಷೇಮ ಮತ್ತಿತರ ಬಗ್ಗೆ ಮಾಹಿತಿ ಪಡೆಯಲಾಗುತ್ತದೆ ಎಂದು ಶಾಸಕರು ಹೇಳಿದರು.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ಕಾರ್ಯಪ್ಪ, ಅಧೀಕ್ಷಕ ಡಾ. ಮಂಜುನಾಥ್, ಸ್ಥಾನಿಕ ವೈದ್ಯಾಧಿಕಾರಿ ಡಾ. ರೂಪೇಶ್ ಗೋಪಾಲ್, ಡಾ. ವಿಶಾಲ್ ಕುಮಾರ್ ಇತರರು ಇದ್ದರು.