.jpg)
ಸಿದ್ದಾಪುರ, ಜೂ. ೧: ಹಾಡಹಗಲೇ ವನ್ಯಜೀವಿ ವಲಯ ಅರಣ್ಯ ಪ್ರದೇಶದೊಳಗೆ ಪೊಲೀಸ್ ಸಿಬ್ಬಂದಿಯೋರ್ವರು ಅಕ್ರಮ ಪ್ರವೇಶ ಮಾಡಿ ತೇಗದ ಮರವನ್ನು ಕಡಿಸಿರುವ ಆರೋಪದಡಿಯಲ್ಲಿ ಪೊಲೀಸ್ ಸಿಬ್ಬಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಆನೆಚೌಕೂರು ವನ್ಯಜೀವಿ ವಲಯಕ್ಕೆ ಸೇರಿರುವ ಮಾಲ್ದಾರೆ ಸಮೀಪದ ತಟ್ಟಳ್ಳಿಯ ಮೀಸಲು ಅರಣ್ಯ ಪ್ರದೇಶದಲ್ಲಿ ಸಿದ್ದಾಪುರದ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿ ಶಿವಕುಮಾರ್ ಎಂಬವರು ವನ್ಯಜೀವಿ ಅರಣ್ಯ ಪ್ರದೇಶದೊಳಗೆ ಅಕ್ರಮ ಪ್ರವೇಶ ಮಾಡಿ ಬೇರೆಯೊಬ್ಬ ವ್ಯಕ್ತಿ ಮೂಲಕ ತೇಗದ ಮರವೊಂದನ್ನು ಕಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ತಟ್ಟಳ್ಳಿ ಹಾಡಿಯ ನಿವಾಸಿ ಜೆ.ಬಿ. ಲಿಂಗಪ್ಪ ಅವರು ಅರಣ್ಯ ಇಲಾಖಾಧಿಕಾರಿಗಳಿಗೆ ದೂರು ನೀಡಿದ ಮೇರೆಗೆ ಸ್ಥಳಕ್ಕೆ ಆನೆಚೌಕೂರು ವನ್ಯಜೀವಿ ವಲಯ ಅರಣ್ಯಾಧಿಕಾರಿ ಕಿರಣ್ ಹಾಗೂ ಉಪವಲಯ ಅರಣ್ಯಾಧಿಕಾರಿ ಚೆನ್ನವಿರೇಶ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಲ್ಲದೇ ಕಡಿದ ತೇಗದ ಮರವನ್ನು ವಶಪಡಿಸಿಕೊಂಡು ಪೊಲೀಸ್ ಸಿಬ್ಬಂದಿ ಶಿವಕುಮಾರ್ ವಿರುದ್ಧ ಅರಣ್ಯಕ್ಕೆ ಅಕ್ರಮ ಪ್ರವೇಶ ಇನ್ನಿತರ ಪ್ರಕರಣ ದಾಖಲಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ. ಅರಣ್ಯ ಇಲಾಖೆಯ ಮೇಲಧಿಕಾರಿಗಳು ಮತ್ತಷ್ಟು ತನಿಖೆ ನಡೆಸುತ್ತಿದ್ದಾರೆ. - ವಾಸು