ಮಡಿಕೇರಿ, ಜೂ. ೨: ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಕೂಡ ಶ್ರಮಿಸುತ್ತಿದ್ದು, ಇವರುಗಳಿಗೆ ಅಗತ್ಯ ನೆರವು ಕಲ್ಪಿಸುವ ಅಗತ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ ತಿಳಿಸಿದ್ದಾರೆ.
ಬೆಟ್ಟಗೇರಿ, ಎಮ್ಮೆಮಾಡು, ಅಯ್ಯಂಗೇರಿ, ಕಕ್ಕಬ್ಬೆ, ನಾಪೋಕ್ಲು ಗ್ರಾ.ಪಂ.ಗಳಿಗೆ ಭೇಟಿ ನೀಡಿದ ಅವರು ಕೋವಿಡ್ ನಿಯಂತ್ರಣಕ್ಕಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚಿಸಿದರು. ಗ್ರಾ.ಪಂ. ಜನಪ್ರತಿನಿಧಿಗಳು, ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಪ್ರಯತ್ನದಿಂದ ಈ ಭಾಗದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ನಂತರ ಮಾತನಾಡಿದ ವೀಣಾ ಅಚ್ಚಯ್ಯ, ಅಯ್ಯಂಗೇರಿ ವ್ಯಾಪ್ತಿಯಲ್ಲಿ ಎಲ್ಲಾ ಸೋಂಕಿತರು ಗುಣಮುಖರಾಗಿದ್ದು, ಗ್ರಾ.ಪಂ. ಕಾರ್ಯಪಡೆಗಳು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸೋಂಕು ಉಲ್ಬಣಗೊಳ್ಳದಿರಲು ಇದೂ ಒಂದು ಕಾರಣವಾಗಿದೆ. ಆದರೆ ನಾಪೋಕ್ಲು ಸುತ್ತಮುತ್ತಲ ಗ್ರಾಮಸ್ಥರಿಗೆ ಮಳೆಗಾಲದಲ್ಲಿ ಎದುರಾಗಬಹುದಾದ ಸಮಸ್ಯೆಗಳ ಬಗ್ಗೆ ಆತಂಕ ಕಾಡಿದೆ. ನದಿಯಲ್ಲಿ ಪ್ರವಾಹ ಎದುರಾದರೆ ಮತ್ತು ರಸ್ತೆ ಸಂಪರ್ಕ ಕಡಿತಗೊಂಡರೆ ಕೋವಿಡ್ ಸೋಂಕಿತರನ್ನು ದೂರದ ಮಡಿಕೇರಿಗೆ ಕರೆದೊಯ್ಯುವುದು ಕಷ್ಟವಾಗಲಿದೆ. ಆದ್ದರಿಂದ ನಾಪೋಕ್ಲುವಿನಲ್ಲಿ ಕೂಡ ಕೋವಿಡ್ ಸೆಂಟರ್ ಆರಂಭಿಸಬೇಕೆನ್ನುವ ಬೇಡಿಕೆ ಕೇಳಿ ಬಂದಿದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಹೇಳಿದರು.ಕೋವಿಡ್ ಸೋಂಕನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಿಯಂತ್ರಿಸಲು ಎಲ್ಲರ ಸಹಕಾರದ ಅಗತ್ಯವಿದೆ. ಸರ್ಕಾರದ ಮಾರ್ಗಸೂಚಿಗಳನ್ನು ಎಲ್ಲರೂ ಪಾಲಿಸಬೇಕು, ಸ್ವಚ್ಛತೆಯನ್ನು ಕಾಪಾಡಬೇಕು, ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು, ಅನಾರೋಗ್ಯ ಕಾಡಿದರೆ ತಕ್ಷಣ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಮುಂದಿನ ದಿನಗಳಲ್ಲಿ ಉಳಿದ ಜಿಲ್ಲೆಯ ಎಲ್ಲಾ ಗ್ರಾ.ಪಂ.ಗಳಿಗೆ ಭೇಟಿ ನೀಡಿ ಕೋವಿಡ್ ನಿಯಂತ್ರಣ ಮತ್ತು ಜನರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರಕ್ಕಾಗಿ ಪ್ರಯತ್ನಿಸುವುದಾಗಿ ತಿಳಿಸಿದರು.
ಇದೇ ಸಂದರ್ಭ ಅಂಗನವಾಡಿ ಕಾರ್ಯಕರ್ತೆಯರು ವೀಣಾ ಅಚ್ಚಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿ ಕೋವಿಡ್ ನಿಯಂತ್ರಣ ಸೇವೆಯಲ್ಲಿ ತೊಡಗಿಸಿಕೊಂಡಿರುವ ನಮಗೂ ಅಗತ್ಯ ನೆರವು ಕಲ್ಪಿಸಿಕೊಡುವಂತೆ ಕೋರಿದರು. ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತಿತರರು ಹಾಜರಿದ್ದರು.