ಸೋಮವಾರಪೇಟೆ, ಜೂ.೨: ತಾಲೂಕಿನ ಗೆಜ್ಜೆಹಣಕೋಡು ಗ್ರಾಮದಲ್ಲಿರುವ ಸ್ಮಶಾನ ಜಾಗದಲ್ಲಿ ಕಸ ವಿಲೇವಾರಿ ಘಟಕ ಸ್ಥಾಪಿಸಲು ಗ್ರಾಮ ಪಂಚಾಯಿತಿ ಮುಂದಾಗಿರುವ ಕ್ರಮಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿ ಶಾಸಕ ಅಪ್ಪಚ್ಚುರಂಜನ್ ಅವರಲ್ಲಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೆಜ್ಜೆಹಣಕೋಡು ಗ್ರಾಮದಲ್ಲಿ ಕಳೆದ ನೂರಾರು ವರ್ಷಗಳಿಂದ ಗ್ರಾಮಕ್ಕೆ ಹೊಂದಿಕೊAಡAತಿರುವ ಪೈಸಾರಿ ಜಾಗದಲ್ಲಿ ಮೃತಪಟ್ಟವರ ಅಂತ್ಯಕ್ರಿಯೆ ನಡೆಸುವ ಮೂಲಕ ಸ್ಮಶಾನ ಜಾಗವಾಗಿ ಉಳಿಸಿಕೊಂಡಿದ್ದರು. ಆದರೆ ಇತ್ತೀಚೆಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಕಸ ವಿಲೇವಾರಿಗಾಗಿ ಇದೇ ಜಾಗ ಗುರುತಿಸಿ ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ಕಾಮಗಾರಿ ನಡೆಸಲು ಮುಂದಾಗಿರುವುದು ಸ್ಥಳೀಯರ ಅಸಮಾಧಾನಕ್ಕೆ ಕಾರಣವಾಗಿದೆ.

ಈ ಹಿಂದೆ ನಡೆದ ಗ್ರಾಮ ಸಭೆಗಳಲ್ಲೂ ಈ ಯೋಜನೆಗೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದರು. ಇದಕ್ಕೆ ಸೊಪ್ಪು ಹಾಕದ ಅಧಿಕಾರಿಗಳು ಯೋಜನೆ ಜಾರಿಗೊಳಿಸಲು ಮುಂದಾಗಿದ್ದು, ಇದರಿಂದ ಆಕ್ರೋಶ ಗೊಂಡಿರುವ ಗ್ರಾಮಸ್ಥರು ಶಾಸಕ ರಂಜನ್ ಹಾಗೂ ಇತರ ಇಲಾಖಾಧಿಕಾರಿಗಳನ್ನು ಭೇಟಿಯಾಗಿ ಅಸಮಾಧಾನ ವ್ಯಕ್ತಪಡಿಸಿದರು.

ಸ್ಮಶಾನ ಜಾಗವನ್ನು ಹಾಗೆಯೇ ಉಳಿಸಿಕೊಳ್ಳಬೇಕು. ಕಸ ವಿಲೇವಾರಿಗೆ ಇತರ ಸರ್ಕಾರಿ ಜಾಗವನ್ನು ಬಳಸಿಕೊಳ್ಳಲು ಗ್ರಾ.ಪಂ. ಮುಂದಾಗಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು. ಈ ಸಂದರ್ಭ ಪ್ರತಿಕ್ರಿಯಿಸಿದ ಶಾಸಕರು, ತಮ್ಮ ಗ್ರಾಮ ಪಂಚಾಯ್ತಿ ಪ್ರವಾಸ ಹಾಗೂ ಟಾಸ್ಕ್ ಫೋರ್ಸ್ ಸಮಿತಿ ಸಭೆಗಳು ಮುಗಿದ ನಂತರ ಅಧಿಕಾರಿಗಳೊಡನೆ ಚರ್ಚಿಸಿ ಸಮಸ್ಯೆ ಇತ್ಯರ್ಥ ಪಡಿಸುವದಾಗಿ ಭರವಸೆ ನೀಡಿದರು.

ಈ ಸಂದರ್ಭ ತಹಶೀಲ್ದಾರ್ ಗೋವಿಂದರಾಜು, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಜಯಣ್ಣ, ಠಾಣಾಧಿಕಾರಿ ಶ್ರೀಧರ್, ಗ್ರಾಮದ ಪ್ರಮುಖರಾದ ನವೀನ್‌ಕುಮಾರ್, ದಯಾಕರ, ಮಹೇಶ್, ತ್ಯಾಗರಾಜ, ಗಣೇಶ, ಜಯರಾಜ್, ಧರ್ಮಾವತಿ, ತಂಗಮ್ಮ ಸೇರಿದಂತೆ ಇತರರು ಹಾಜರಿದ್ದರು.