ಮಡಿಕೇರಿ, ಜೂ. ೭: ಜಿಲ್ಲೆಯಲ್ಲಿನ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು ಬಲಪಡಿಸುವಲ್ಲಿ ಜಿಲ್ಲೆಯ ಪ್ರಮುಖ ಕೈಗಾರಿಕೋದ್ಯಮಿಗಳ ಜೊತೆ ಜೂಮ್ ಆ್ಯಪ್ ಮೂಲಕ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಮಾಹಿತಿ ಪಡೆದರು.
ಲಾಕ್ಡೌನ್ ಹಿನ್ನೆಲೆ ಕೈಗಾರಿಕೆಗಳಿಗೆ ಸರ್ಕಾರದಿಂದ ನೀಡಲಾಗುವ ಸೌಲಭ್ಯಗಳನ್ನು ಕಲ್ಪಿಸುವುದು. ಜಿಲ್ಲೆಯಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಅಭಿವೃದ್ಧಿಗೆ ಉತ್ತೇಜನ ನೀಡುವುದು, ಮತ್ತಿತ್ತರ ಬಗ್ಗೆ ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಚಾರುಲತಾ ಸೋಮಲ್ ಅವರು ಕೋವಿಡ್-೧೯ ಲಾಕ್ಡೌನ್ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಕೈಗಾರಿಕೆಗಳಿಗೆ ಅವಕಾಶ ನೀಡಲಾಗುವುದು. ಈಗಾಗಲೇ ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯ ತೊಂದರೆಯಾಗದAತೆ ಕ್ರಮ ವಹಿಸಲಾಗಿದೆ ಎಂದರು.
ಫ್ಯಾನ್ಸಿ ಗಣಪತಿ ಅವರು ಮಾತನಾಡಿ ಜಿಲ್ಲೆಯ ಕೃಷಿಕರು ಉತ್ಪಾದಿಸಿದ ಉತ್ಪನ್ನಗಳಿಗೆ ಶೀತಲೀಕರಣ ಘಟಕ ಇರುವುದಿಲ್ಲ. ಆದ್ದರಿಂದ ಶೀತಲೀಕರಣ ಘಟಕ ನಿರ್ಮಾಣ ಮಾಡಬೇಕು. ಜಿಲ್ಲೆಯಲ್ಲಿ ಮಹಿಳೆಯರು ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಕ್ಷೇತ್ರದಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದಾರೆ. ಆ ದಿಸೆಯಲ್ಲಿ ಇವರು ಉತ್ಪಾದಿಸಿದ ಉತ್ಪನ್ನಗಳಿಗೆ ಒಳ್ಳೆಯ ಮಾರುಕಟ್ಟೆ ಒದಗಿಸಬೇಕು ಎಂದರು. ಕೈಗಾರಿಕೆ ಸ್ಥಾಪಿಸಲು ಮುಂದೆ ಬರುವವರಿಗೆ ಸ್ವಂತ ಜಾಗದಲ್ಲಿ ಭೂ ಪರಿವರ್ತನೆಗೆ ಅವಕಾಶ ಮಾಡಬೇಕು ಎಂದು ಫ್ಯಾನ್ಸಿ ಗಣಪತಿ ಅವರು ಕೋರಿದರು. ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ ಕೈಗಾರಿಕೆ ಸ್ಥಾಪಿಸಲು ಮುಂದೆ ಬರುವವರಿಗೆ ಅಗತ್ಯ ಸಹಕಾರ ನೀಡಲಾಗುವುದು.
ಜಿಲ್ಲೆಯಲ್ಲಿ ಸಣ್ಣ ಕೈಗಾರಿಕೆಗಳ ಉತ್ತೇಜನಕ್ಕೆ ಇನ್ನಷ್ಟು ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಕೈಗಾರಿಕಾ ಇಲಾಖೆಯ ಜಿಲ್ಲಾ ಜಂಟಿ ನಿರ್ದೇಶಕರಾದ ಟಿ. ದಿನೇಶ್, ನಾನಾ ಇಲಾಖೆ ಅಧಿಕಾರಿಗಳು ಇದ್ದರು.