ಪೆರಾಜೆ, ಜೂ. ೮: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಟಾಸ್ಕ್ ಫೋರ್ಸ್ ಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಂದ್ರಕಲಾ ಬಳ್ಳಡ್ಕ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಕೊರೊನಾ ಸೋಂಕು ತಡೆಗಟ್ಟಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸುದೀರ್ಘವಾಗಿ ಚರ್ಚೆಗಳು ನಡೆದವು, ಮತ್ತು ಕೊರೊನಾ ಸೋಂಕಿನ ಬಗ್ಗೆ ಕೈಗೊಳ್ಳಲಾಗಿರುವ ವಿವಿಧ ಕ್ರಮಗಳ ಬಗ್ಗೆ ಸಭೆಯಲ್ಲಿ ಹಾಜರಿದ್ದ ಇಲಾಖೆಯವರು ಮಾಹಿತಿ ನೀಡಿದರು.
ಕೋವಿಡ್ ಪ್ರಕರಣಗಳು ಗ್ರಾಮದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದು ಹಾಗೂ ಪೆರಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯು ಸಕ್ರಿಯ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ತಾ. ೮ ರಿಂದ ೧೪ರ ವರೆಗೆ ಕಟ್ಟುನಿಟ್ಟಿನ ಕ್ರಮ ಮುಂದುವರಿಸಲು ತೀರ್ಮಾನಿಸಲಾಗಿದೆ.
ಆರೋಗ್ಯ ವಿಚಾರವನ್ನು ಹೊರತು ಪಡಿಸಿ ಪಟ್ಟಣಗಳಿಗೆ ಹೋಗುವುದನ್ನು ನಿರ್ಬಂಧಿಸಿದೆ. ಅಗತ್ಯ ವಸ್ತುಗಳ ಖರೀದಿಗೆ ಸೋಮವಾರ, ಬುಧವಾರ ಹಾಗೂ ಶುಕ್ರವಾರ ಬೆಳಿಗ್ಗೆ ೧೦ರ ವರೆಗೆ ಪೆರಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅವಕಾಶ ನೀಡಲಾಗಿದೆ.
ಪೆರಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಹೊರಗಿಂದ ಕೂಲಿ ಕಾರ್ಮಿಕರನ್ನು ಕರೆತರುವುದನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಪೆರಾಜೆ ವ್ಯಾಪ್ತಿಯಲ್ಲಿ ವ್ಯಾಪಾರ ನಡೆಸುವ ಅಂಗಡಿ ಮಾಲೀಕರು ಹಾಗೂ ಆಟೋ ಮತ್ತು ಜೀಪ್ ಚಾಲಕರು ಕಡ್ಡಾಯವಾಗಿ ಆರ್ಟಿಪಿಸಿಆರ್ ನೆಗೆಟಿವ್ ವರದಿ ಹೊಂದಿರಬೇಕು. ಹೊಂದಿಲ್ಲದಿದ್ದಲ್ಲಿ ದಂಡ ವಿಧಿಸಲಾಗುತ್ತದೆ ಎಂದು ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಯಿತು.
ಈ ಸಂದರ್ಭ ಪಂಚಾಯಿತಿ ಉಪಾಧ್ಯಕ್ಷೆ ಜಯಲಕ್ಷಿö್ಮ ಧರಣಿಧರ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹದೇವ ಪ್ರಭು, ನಾಗೇಶ್ ಕುಂದಲ್ಪಾಡಿ ಸೇರಿದಂತೆ ಪಂಚಾಯಿತಿ ಸದಸ್ಯರುಗಳು, ಆಶಾ-ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿಗಳು, ಟಾಸ್ಕ್ ಫೋರ್ಸ್ ಸಮಿತಿಯ ಸದಸ್ಯರುಗಳು ಹಾಜರಿದ್ದರು.