ಸಿದ್ದಾಪುರ, ಜೂ. ೧೦: ಕೊಡಗು ಜಿಲ್ಲೆಯ ಕೆಲವು ಗ್ರಾಮಾಂತರ ಪ್ರದೇಶಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟಲು ಎಲ್ಲಾ ಗ್ರಾಮ ಪಂಚಾಯಿತಿಗಳ ಟಾಸ್ಕ್ಫೋರ್ಸ್ ಸಮಿತಿಯವರು ಮುತುವರ್ಜಿ ವಹಿಸಬೇಕೆಂದು ಶಾಸಕ ಕೆ.ಜಿ. ಬೋಪಯ್ಯ ಕರೆ ನೀಡಿದರು.
ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡು ಬಡವರಿಗೆ ತಮ್ಮ ವತಿಯಿಂದ ನೀಡಿರುವ ಕಿಟ್ಗಳನ್ನು ವಿತರಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಕೊರೊನಾ ವೈರಸ್ ಪ್ರಕರಣವು ಕಡಿಮೆಯಾಗಿ ಸಮಾಧಾನ ತಂದಿತ್ತು. ಆದರೆ ಇದೀಗ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಮೂರು ದಿನಗಳಿಂದ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆಯೆಂದು ಕಳವಳ ವ್ಯಕ್ತಪಡಿಸಿದರು.
ಈಗಾಗಲೇ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸೋಂಕಿತರ ಪ್ರಮಾಣ ಕಡಿಮೆ ಇರುವ ಜಿಲ್ಲೆಗಳಲ್ಲಿ ಹಂತ ಹಂತವಾಗಿ ಲಾಕ್ಡೌನ್ ಸಡಿಲಿಕೆ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ. ಆದರೆ ಕೊಡಗಿನಲ್ಲಿ ಇದೀಗ ಮತ್ತೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟಬೇಕೆಂದರು. ವೀರಾಜಪೇಟೆ ತಾಲೂಕಿನ ಸಿದ್ದಾಪುರ, ಅಮ್ಮತ್ತಿ, ಗೋಣಿಕೊಪ್ಪಲು ಭಾಗದ ಗ್ರಾಮೀಣ ಪ್ರದೇಶಗಳಲ್ಲಿರುವ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೂ ಸೋಂಕು ಪತ್ತೆ ಆಗಿರುತ್ತದೆ. ಇದನ್ನು ನಿಯಂತ್ರಣಕ್ಕೆ ತರಲು ಎಲ್ಲರೂ ಶ್ರಮಿಸಬೇಕೆಂದು ಬೋಪಯ್ಯ ಸೂಚಿಸಿದರು.
ಹೊರ ಜಿಲ್ಲೆಯಿಂದ ಹಾಗೂ ಒಂದು ಊರಿನಿಂದ ಇನ್ನೊಂದು ಊರಿಗೆ ವಾಹನಗಳಲ್ಲಿ ಕಾರ್ಮಿಕರು ತೆರಳದಂತೆ ಹಾಗೂ ಕಾರ್ಮಿಕರನ್ನು ಕರೆದುಕೊಂಡು ಹೋಗುವ ವಾಹನ ಗಳಿಗೆ ಕಡಿವಾಣ ಹಾಕಬೇಕೆಂದು ಪೊಲೀಸ್ ಇಲಾಖಾಧಿಕಾರಿಗಳಿಗೆ ತಿಳಿಸಿದರು.
ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಟಾಸ್ಕ್ಫೋರ್ಸ್ ಸಮಿತಿಯು ಕೇವಲ ಕೊರೊನಾ ಪ್ರಕರಣದ ವಿಚಾರಕ್ಕೆ ಮಾತ್ರ ಸೀಮಿತವಾಗದೇ ಮುಂದಿನ ದಿನಗಳಲ್ಲಿ ಪ್ರವಾಹ ಬರುವ ಸಂದರ್ಭದಲ್ಲಿ ಕೂಡ ನಿವಾಸಿಗಳ ಸಮಸ್ಯೆಗಳಿಗೆ ಸ್ಪಂದಿಸಬೇಕೆAದು ಶಾಸಕರು ನಿರ್ದೇಶನ ನೀಡಿದರು. ವೀರಾಜಪೇಟೆ ತಾಲೂಕಿನ ೭ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಾ. ೧೪ ರಂದು ಸಭೆ ನಡೆಸಿ ಅಧಿಕಾರಿಗಳ ಸಮ್ಮುಖದಲ್ಲಿ ಹಾಗೂ ಟಾಸ್ಕ್ಫೋರ್ಸ್ ಸಮಿತಿಯವರ ಮುಖಾಂತರ ಕೊರೊನಾ ಪ್ರಕರಣಗಳನ್ನು ನಿಯಂತ್ರಣಕ್ಕೆ ತರುವ ಬಗ್ಗೆ ಚರ್ಚಿಸಲಾಗುವುದೆಂದರು.
ಈ ಸಂದರ್ಭದಲ್ಲಿ ಸಿದ್ದಾಪುರ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ರೀನಾ ತುಳಸಿ, ಉಪಾಧ್ಯಕ್ಷ ಮಹೇಶ್ಕುಮಾರ್, ಶಾಸಕರ ಆಪ್ತಕಾರ್ಯದರ್ಶಿ ಮಲ್ಲಂಡ ಮಧು ದೇವಯ್ಯ, ಸಿದ್ದಾಪುರ ಠಾಣಾಧಿಕಾರಿ ಮೋಹನ್ರಾಜ್ ಹಾಗೂ ಪಿಡಿಓ ವಿಶ್ವನಾಥ್ ಮತ್ತು ಗ್ರಾಮ ಪಂಚಾಯಿತಿ ಸದಸ್ಯರುಗಳು ಹಾಜರಿದ್ದರು. -ಚಿತ್ರ, ವರದಿ : ವಾಸು