ಕೂಡಿಗೆ, ಜೂ. ೧೦: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಟಾಸ್ಕ್ಫೋರ್ಸ್ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.ಎಸ್. ಮಂಜುನಾಥ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಕೊರೊನಾ ಸೋಂಕಿನ ಬಗ್ಗೆ ಕೈಗೊಳ್ಳಲಾಗಿರುವ ವಿವಿಧ ಕ್ರಮಗಳ ಬಗ್ಗೆ ಸಭೆಯಲ್ಲಿ ಹಾಜರಿದ್ದ ವಿವಿಧ ಇಲಾಖೆಯ ಅಧಿಕಾರಿಗಳು ತಿಳಿಸಿದರು. ಕೊರೊನಾ ಸೋಂಕು ತಡೆಗಟ್ಟಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸುರ್ದಿಘವಾಗಿ ಚರ್ಚೆಗಳು ನಡೆದವು. ಅಲ್ಲದೆ ಗ್ರಾಮ ವ್ಯಾಪ್ತಿಯ ಎಲ್ಲಾ ಗ್ರಾಮಸ್ಥರು ಕೊರೊನಾ ಲಸಿಕೆಯನ್ನು ಹಾಕಿಸಿ ಕೊಳ್ಳಲು ತಿಳುವಳಿಕೆ ನೀಡುವಂತೆ ಅಭಿವೃದ್ಧಿ ಅಧಿಕಾರಿ ರಾಕೇಶ್ ತಿಳಿಸಿದರು. ಕೊರೊನಾ ಸೋಂಕಿತ ವ್ಯಕ್ತಿಯನ್ನು ಮನೆಗಳಲ್ಲಿ ಇರಲು ಅವಕಾಶ ನೀಡದೆ ಸ್ಥಳೀಯ ಕೋವಿಡ್ ಸೆಂಟರ್ಗೆ ಕಳುಹಿಸುವಂತೆ ತೀರ್ಮಾನಿಸಲಾಯಿತು. ಸಭೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಅರುಣ ಕುಮಾರಿ, ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಭರತ್, ಅಭಿವೃದ್ಧಿ ಅಧಿಕಾರಿ ರಾಕೇಶ್, ಆರೋಗ್ಯ ಇಲಾಖೆಯ ಹಿರಿಯ ಆರೋಗ್ಯ ಸಹಾಯಕರು, ದಾದಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಗ್ರಾಮದ ಪಂಚಾಯಿತಿ ಸರ್ವ ಸದಸ್ಯರು, ಇತರರು ಹಾಜರಿದ್ದರು.