ಸಿದ್ದಾಪುರ, ಜೂ. ೧೧: ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ತಾಲೂಕು ತಹಶೀಲ್ದಾರ್ ಅವರ ಸೂಚನೆ ಮೇರೆಗೆ ಸೋಂಕಿತರ ಮನೆಗಳ ಸುತ್ತ ಮುತ್ತಲಿನ ನಿವಾಸಿಗಳ ಗಂಟಲು ದ್ರವ ಪರೀಕ್ಷೆ ಮಾಡುವ ಕಾರ್ಯಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಾಬು ವರ್ಗೀಸ್ ಹಾಗೂ ಪಿಡಿಓ ಅನಿಲ್ ಕುಮಾರ್ ನೇತೃತ್ವದಲ್ಲಿ ಚಾಲನೆ ನೀಡಲಾಗಿದೆ.

ಸೋಮವಾರಪೇಟೆ ತಾಲೂಕಿನಲ್ಲಿ ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಆದೇಶದ ಮೇರೆಗೆ ಸೋಮವಾರಪೇಟೆ ತಾಲೂಕು ತಹಶೀಲ್ದಾರ್ ಗೋವಿಂದರಾಜ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸೋಂಕಿತರ ಮನೆ ಮನೆಗಳಿಗೆ ತೆರಳಿ ಎಚ್ಚರಿಕೆಯಿಂದ ಇರುವಂತೆ ತಿಳಿಸಿದ್ದು, ಇದಾದ ಬಳಿಕ ಇದೀಗ ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸೋಂಕಿತರ ಅಕ್ಕಪಕ್ಕದ ಮನೆಗಳ ನಿವಾಸಿಗಳ ಗಂಟಲು ದ್ರವ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳ, ಸಿಬ್ಬಂದಿಗಳ ಸಮ್ಮುಖದಲ್ಲಿ ಗಂಟಲು ದ್ರವ ಪರೀಕ್ಷೆ ನಡೆಸಲಾಗುತ್ತಿದೆ. ಬುಧವಾರದಂದು ೧೦೦ಕ್ಕೂ ಅಧಿಕ ಮಂದಿಯ ಗಂಟಲು ದ್ರವ ಪರೀಕ್ಷೆ ನಡೆಸಲಾಯಿತು. ಈ ಸಂದರ್ಭದಲ್ಲಿ ನಾಲ್ಕೆöÊದು ಮಂದಿ ಸೋಂಕಿತರು ಪತ್ತೆಯಾದರು ಎಂದು ಅಧಿಕಾರಿಗಳು ತಿಳಿಸಿದರು. ನೆಲ್ಲಿಹುದಿಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೊರೊನಾ ಮುಕ್ತ ಮಾಡಲು ಪಂಚಾಯಿತಿ ಆಡಳಿತ ಮಂಡಳಿ ಹಾಗೂ ಟಾಸ್ಕ್ಫೋರ್ಸ್ ಸಮಿತಿ ಶ್ರಮಿಸುತ್ತಿದೆ. ಅಲ್ಲದೆ ಗಂಟಲು ದ್ರವ ಪರೀಕ್ಷೆಯನ್ನು ಮುಂದುವರಿಸ ಲಾಗುವುದೆಂದು ಪಿಡಿಓ ಅನಿಲ್ ಕುಮಾರ್ ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ಸಾಬು ವರ್ಗೀಸ್, ಆರೋಗ್ಯ ಇಲಾಖೆ ಸಿಬ್ಬಂದಿ ಗೀತಾ ಹಾಗೂ ಗ್ರಾ.ಪಂ. ಸದಸ್ಯರುಗಳು, ಆಶಾ ಕಾರ್ಯಕರ್ತೆ ಯರು, ಕೊರೊನಾ ನಿಗ್ರಹದಳದ ಸದಸ್ಯರುಗಳು ಹಾಜರಿದ್ದರು.