ಮಡಿಕೇರಿ, ಜೂ. ೧೬: ಇಲ್ಲಿಗೆ ಸಮೀಪದ ಕಗ್ಗೋಡ್ಲು ಗ್ರಾಮದ ಜಂಕ್ಷನ್ ಬಳಿ ಕಾಡುಕುರಿಯ ಒಣಗಿದ ಚರ್ಮಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಮಡಿಕೇರಿ ಅರಣ್ಯ ಸಂಚಾರಿ ದಳದವರು ಬಂದಿಸಿದ್ದಾರೆ.

ವೀರಾಜಪೇಟೆ ತಾಲೂಕಿನ ಕದನೂರು ಗ್ರಾಮದ ಕೆ.ಎಂ. ಜೋಯಪ್ಪ (೩೭) ಎಂಬಾತ ಕಾಡುಕುರಿಯ ಎರಡು ಚರ್ಮಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಬಗ್ಗೆ ದೊರೆತ ಸುಳಿವಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆತನನ್ನು ಬಂದಿಸಿ ಚರ್ಮವನ್ನು ವಶಪಡಿಸಿಕೊಂಡಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ಕೆ ೧೯೭೨ರಂತೆ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಅರಣ್ಯ ಸಂಚಾರಿ ದಳದ ಪೊಲೀಸ್ ಅಧೀಕ್ಷಕ ಸುರೇಶ್ ಬಾಬು ಅವರ ಮಾರ್ಗದರ್ಶನದಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಠಾಣಾಧಿಕಾರಿ ಸಿ.ಯು. ಸವಿ, ಹೆಡ್‌ಕಾನ್ಸ್ಟೇಬಲ್‌ಗಳಾದ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್ ಹಾಗೂ ಚಾಲಕ ಮೋಹನ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.