ಮಡಿಕೇರಿ, ಜೂ.೨೩ : ಬೇಂಗೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಸಕ್ರಿಯವಾಗಿದ್ದ ೧೪೬ ಕೋವಿಡ್ ಪ್ರಕರಣಗಳು ಗುಣಮುಖಗೊಂಡು ಇದೀಗ ಯಾವುದೇ ಪ್ರಕರಣಗಳು ಪತ್ತೆಯಾಗದೆ ಕೋವಿಡ್ ಮುಕ್ತ ಗ್ರಾಮವಾಗಿ ಪರಿವರ್ತನೆಗೊಂಡಿದೆ ಎಂದು ಪಂಚಾಯಿತಿ ಅಧ್ಯಕ್ಷೆ ಯಶೋಧ ಹಾಗೂ ಅಭಿವೃದ್ಧಿ ಅಧಿಕಾರಿ ಬಿಪಿನ್ ತಿಳಿಸಿದ್ದಾರೆ.
ಕೋವಿಡ್ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಟಾಸ್ಕ್ ಫೋರ್ಸ್ ಸಮಿತಿಯನ್ನು ರಚಿಸಿ ಗ್ರಾಮದ ವಿವಿಧೆಡೆ ಜನಜಾಗೃತಿ ಮೂಡಿಸಲಾಗಿದೆ ಮತ್ತು ಸ್ಯಾನಿಟೈಸ್ ಮಾಡಲಾಗಿದೆ. ವರ್ತಕರಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿತ್ತು. ಉಚಿತ ಮಾಸ್ಕ್ ವಿತರಣೆ ಮಾಡುವ ಮೂಲಕ ಗ್ರಾಮಸ್ಥರಿಗೆ ಕೋವಿಡ್ ಬಗ್ಗೆ ಹೆಚ್ಚಿನ ಅರಿವು ಮೂಡಿಸಲಾಗಿತ್ತು. ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಗ್ರಾ.ಪಂ ನ್ನು ಕೋವಿಡ್ ಮುಕ್ತಗೊಳಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಕೋವಿಡ್ ಟಾಸ್ಕ್ ಫೋರ್ಸ್ ಮೂಲಕ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿಯರು, ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸ್ ಸಿಬ್ಬಂದಿಗಳು, ಪಂಚಾಯಿತಿ ಆಡಳಿತ ಮಂಡಳಿ, ಸಿಬ್ಬಂದಿಗಳು ಹಾಗೂ ಸಾರ್ವಜನಿಕರ ಸಹಕಾರದಿಂದ ಕೋವಿಡ್ ಸೋಂಕನ್ನು ತಡೆಗಟ್ಟಲು ಸಾಧ್ಯವಾಯಿತು ಎಂದು ಯಶೋಧ ಹಾಗೂ ಬಿಪಿನ್ ಹರ್ಷವ್ಯಕ್ತಪಡಿಸಿದ್ದಾರೆ. ಇನ್ನು ಮುಂದೆಯೂ ಕೋವಿಡ್ ಸೋಂಕಿನ ವಿರುದ್ಧ ಒಗ್ಗಟ್ಟಿನ ಪರಿಶ್ರಮ ಮುಂದುವರೆಸಲಾಗುವುದು ಎಂದು ತಿಳಿಸಿದ್ದಾರೆ.