ಮಡಿಕೇರಿ, ಜೂ. ೩೦: ಕೊರೊನಾ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಆದೇಶದಂತೆ ಕೊಡಗಿನಲ್ಲೂ ಲಾಕ್‌ಡೌನ್ ಜಾರಿಯಲ್ಲಿದ್ದು, ಪ್ರವಾಸೋದ್ಯಮ ಚಟುವಟಿಕೆಗಳನ್ನು ಕೂಡ ನಿಷೇಧಿಸಲಾಗಿದೆ. ಹೀಗಿದ್ದರೂ ನಿಯಮ ಉಲ್ಲಂಘಿಸಿ ಪ್ರವಾಸೋದ್ಯಮ ಚಟುವಟಿಕೆಗಳನ್ನು ಕೈಗೊಂಡರೆ ಸಂಬAಧಿಸಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾ ಉಪ ವಿಭಾಗಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಈಶ್ವರ್ ಕುಮಾರ್ ಖಾಂಡು ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾಡಳಿತ ಭವನದಲ್ಲಿರುವ ತಮ್ಮ ಕಚೇರಿಯಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೊರೊನಾದಿಂದ ಪಾರಾಗುವ ನಿಟ್ಟಿನಲ್ಲಿ ಲಾಕ್‌ಡೌನ್ ಅನ್ನು ಜಾರಿ ಮಾಡಲಾಗಿದೆ. ಪ್ರವಾಸೋದ್ಯಮ ಸೇರಿದಂತೆ ಎಲ್ಲಾ ರೀತಿಯ ಚಟುವಟಿಕೆಗಳಿಗೆ ನಿಷೇಧ ಹೇರಲಾಗಿದೆ. ಆದರೂ ಕೂಡ ಅಕ್ರಮವಾಗಿ ಕೆಲವು ಹೋಂಸ್ಟೇಗಳಲ್ಲಿ ಪ್ರವಾಸಿಗರಿಗೆ ಆಶ್ರಯ ನೀಡುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಈಗಾಗಲೇ ಮೂರು ಹೋಂಸ್ಟೇಗಳ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಇಂತಹ ಪ್ರಕರಣಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ, ಕಂದಾಯ ಹಾಗೂ ಪೊಲೀಸ್ ಇಲಾಖೆ ಒಟ್ಟಾಗಿ ತಂಡವೊAದನ್ನು ರಚಿಸಿ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಳ್ಳಲಾಗಿದೆ. ಕೋವಿಡ್ ನಿಯಮವನ್ನು ಉಲ್ಲಂಘಿಸುವ ಹೋಂಸ್ಟೇ, ರೆಸಾರ್ಟ್, ಹೊಟೇಲ್‌ಗಳ ವಿರುದ್ಧ ಪ್ರಕರಣ ದಾಖಲಿಸಿ ಆರೋಪ ಸಾಬೀತಾದರೆ ಪರವಾನಗಿ ರದ್ದುಗೊಳಿಸಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
೧೦೭೭ಗೆ ದೂರು ನೀಡಿ : ಜಿಲ್ಲೆಯಲ್ಲಿ ಜುಲೈ ೫ರವರೆಗೆ ಲಾಕ್‌ಡೌನ್ ಜಾರಿಯಲ್ಲಿರುತ್ತದೆ. ನಂತರ ಸರ್ಕಾರದ ಆದೇಶದನ್ವಯ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಅಲ್ಲಿಯವರೆಗೆ ಅಕ್ರಮವಾಗಿ ಹೋಂಸ್ಟೇ, ರೆಸಾರ್ಟ್ಗಳಲ್ಲಿ ಪ್ರವಾಸಿಗರು ಆಶ್ರಯ ಪಡೆದಿರುವ ಬಗ್ಗೆ ಮಾಹಿತಿಯಿದ್ದರೆ ಸಾರ್ವಜನಿಕರು ೧೦೭೭ ದೂರವಾಣಿ ಸಂಖ್ಯೆಗೆ ದೂರು ನೀಡಬಹುದು ಎಂದು ಉಪ ವಿಭಾಗಾಧಿಕಾರಿ ತಿಳಿಸಿದರು. ಜಿಲ್ಲೆಯ ಚೆಕ್‌ಪೋಸ್ಟ್ಗಳಲ್ಲೂ ಕೂಡ ಈ ನಿಟ್ಟಿನಲ್ಲಿ ತಪಾಸಣೆಯನ್ನು ಜಾರಿಗೊಳಿಸಲಾಗುತ್ತದೆ ಎಂದು ಅವರು ಹೇಳಿದರು.