ವೀರಾಜಪೇಟೆ, ಜು. ೧೧: ವೀರಾಜಪೇಟೆ ತಾಲೂಕು ಕೆದಮುಳ್ಳೂರು ಗ್ರಾಮ ಪಂಚಾಯಿತಿ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ತೋಮರ ವಾರ್ಡಿನ ಭೂ ಕುಸಿತ ಪ್ರದೇಶದಲ್ಲಿ ವಾಸಿಸುವ ೧೮ ವರ್ಷದ ಮೇಲ್ಪಟ್ಟ ಎಲ್ಲಾ ನಿವಾಸಿಗಳಿಗೆ ಮತ್ತು ಪ್ರಥಮ ಲಸಿಕೆ ಪಡೆದು ೮೫ ದಿನಗಳು ಪೂರ್ಣಗೊಂಡ ವ್ಯಕ್ತಿಗಳಿಗೆ ೨ನೇ ಲಸಿಕೆ ನೀಡುವ ಕಾರ್ಯಕ್ರಮ ಕೆದಮುಳ್ಳೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಆಗಮಿಸಿ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕರು, ಕೊರೊನಾ ತಡೆಗಟ್ಟಲು ಪ್ರತಿಯೊಬ್ಬರು ಲಸಿಕೆ ಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ೫೦೦ ಮಂದಿಗೆ ಲಸಿಕೆ ನೀಡಲಾಯಿತು. ವೇದಿಕೆಯಲ್ಲಿ ವೀರಾಜಪೇಟೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಕೆ.ಸಿ. ಅಪ್ಪಣ್ಣ, ತಾಲೂಕು ವೈದ್ಯಾಧಿಕಾರಿ ಡಾ. ಯತಿರಾಜ್, ಕೆದಮುಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ನಡಿಕೇರಿಯಂಡ ಶೀಲಾ, ಕಾಕೋಟುಪರಂಬು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸುಪ್ರಿಯ ಎಸ್, ಉಪಸ್ಥಿತರಿದ್ದರು.

ಸ್ವಾಗತ ಮತ್ತು ವಂದನಾರ್ಪಣೆಯನ್ನು ಗ್ರಾಮ ಪಂಚಾಯಿತಿಯ ಪಿ.ಡಿ.ಓ. ಪ್ರಮೋದ್ ನಿರ್ವಹಿಸಿದರು. ಗ್ರಾಮ ಪಂಚಾಯಿತಿ ಎಲ್ಲಾ ವಾರ್ಡಿನ ಸದಸ್ಯರು, ಪಂಚಾಯಿತಿ ವ್ಯಾಪ್ತಿಯ ಆಶಾ ಕಾರ್ಯಕರ್ತರು, ಆರೋಗ್ಯ ಸಹಾಯಕಿಯರು, ಅಂಗನವಾಡಿ ಕಾರ್ಯಕರ್ತರು, ಪಂಚಾಯಿತಿ ಸಿಬ್ಬಂದಿಗಳು, ಕಂದಾಯ ಇಲಾಖೆಯ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.