ಸೋಮವಾರಪೇಟೆ, ಜು.೧೨: ಕಾರ್ಮಿಕರು ಕೆಲಸದ ಅವಧಿಯಲ್ಲಿ ಹೆಚ್ಚಿನ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಕರೆ ನೀಡಿದರು.

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಜಿಲ್ಲಾಡಳಿತ, ಜಿ.ಪಂ. ಮತ್ತು ಕಾರ್ಮಿಕರ ಇಲಾಖೆಯ ಆಶ್ರಯದಲ್ಲಿ ಇಲ್ಲಿನ ಪ.ಪಂ. ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ತಾಲೂಕಿನ ನೋಂದಾಯಿತ ಕಾರ್ಮಿಕರಿಗೆ ಕಿಟ್ ವಿತರಿಸಿ ಅವರು ಮಾತನಾಡಿದರು.

ಕಾರ್ಮಿಕರು ಕೆಲಸದ ಸಂದರ್ಭ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇದರೊಂದಿಗೆ ತಲೆಗೆ ಹೆಲ್ಮೆಟ್ ಹಾಕಿಕೊಳ್ಳಬೇಕು ಎಂದು ಸಲಹೆ ನೀಡಿದ ಅವರು, ಕೊರೊನಾ ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ ಕಾರ್ಮಿಕರಿಗೆ ನೆರವು ಒದಗಿಸುವ ದೃಷ್ಟಿಯಿಂದ ಸರ್ಕಾರದ ವತಿಯಿಂದ ಕಿಟ್‌ಗಳನ್ನು ವಿತರಿಸಲಾಗುತ್ತಿದೆ ಎಂದರು.

ಕಾರ್ಮಿಕರು ಸರ್ಕಾರದ ವಿವಿಧ ಯೋಜನೆಗಳನ್ನು ಸದುಪಯೋಗಪಡಿಸಿ ಕೊಳ್ಳಬೇಕು. ಕಾರ್ಮಿಕ ಇಲಾಖೆಯ ಕಾರ್ಯಕ್ರಮಗಳ ಬಗ್ಗೆ ಆಗಾಗ್ಗೆ ಮಾಹಿತಿ ಪಡೆದುಕೊಳ್ಳಬೇಕು. ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡಬೇಕೆಂದು ಕಿವಿಮಾತು ಹೇಳಿದರು.

ಕೊರೊನಾ ಹಿನ್ನೆಲೆ ಸರ್ಕಾರ ನಿಗದಿಪಡಿಸಿರುವ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಇತರ ದೇಶಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದಿದ್ದು, ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತದಲ್ಲಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಈ ಹಿನ್ನೆಲೆ ಮಾಸ್ಕ್ ಧರಿಸದೇ ಓಡಾಡುವ ಪರಿಸ್ಥಿತಿ ಇಲ್ಲ. ಹಾಗಾಗಿ ಎಲ್ಲರೂ ಮಾಸ್ಕ್ ಧರಿಸಲೇಬೇಕೆಂದು ಸೂಚಿಸಿದರು.

ಸೋಮವಾರಪೇಟೆ ಪಟ್ಟಣ ಪಂಚಾಯಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ.ಪಂ. ಪ್ರಭಾರ ಅಧ್ಯಕ್ಷ ಸಂಜೀವ, ಸದಸ್ಯರಾದ ಶೀಲಾ ಡಿಸೋಜ, ಜೀವನ್, ಮಹೇಶ್, ಶರತ್, ಸೋಮೇಶ್, ತಾ.ಪಂ. ಮಾಜಿ ಉಪಾಧ್ಯಕ್ಷ ಅಭಿಮನ್ಯುಕುಮಾರ್, ಜಿಲ್ಲಾ ಕಾರ್ಮಿಕಾಧಿಕಾರಿ ಅನಿಲ್, ವೀರಾಜಪೇಟೆ ತಾಲೂಕು ಅಧಿಕಾರಿ ಜಯಣ್ಣ ಅವರುಗಳು ಉಪಸ್ಥಿತರಿದ್ದರು.