ಕುಶಾಲನಗರ, ಜು. ೧೪: ಸ್ಥಳೀಯ ಪೊಲೀಸ್ ವೃತ್ತ ನಿರೀಕ್ಷಕರ ವಿರುದ್ಧ ತಕ್ಷಣ ಮೇಲಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ನಾಗರಿಕ ಒಕ್ಕೂಟದ ಪ್ರಮುಖರು ಆಗ್ರಹಿಸಿದ್ದಾರೆ.

ಕುಶಾಲನಗರ ಪ್ರವಾಸಿ ಮಂದಿರ ಆವರಣದಲ್ಲಿ ಕಾಂಗ್ರೆಸ್ ಪ್ರಮುಖ ವಿ.ಪಿ. ಶಶಿಧರ್ ನೇತೃತ್ವದಲ್ಲಿ ನಡೆದ ಸಮಾನ ಮನಸ್ಕರ ಸಭೆಯಲ್ಲಿ ವೃತ್ತ ನಿರೀಕ್ಷಕ ಮಹೇಶ್ ನಿರಂತರವಾಗಿ ಸಾರ್ವಜನಿಕರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ; ಇದರಿಂದ ಜನತೆಗೆ ಅನ್ಯಾಯವಾಗಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಮೇಲಧಿಕಾರಿಗಳಿಗೆ ದೂರು ನೀಡಲಾಗಿದೆ ಎಂಬ ಚರ್ಚೆಗಳು ನಡೆದವು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತನಿಖೆ ನಡೆಸುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದ ವಿ.ಪಿ. ಶಶಿಧರ್ ಅಧಿಕಾರಿ ಮೇಲೆ ಭ್ರಷ್ಟಾಚಾರ ಬಗ್ಗೆ ದೂರು ನೀಡಿರುವುದಾಗಿ ತಿಳಿಸಿದ್ದು, ಯಾವುದೇ ಕ್ರಮ ಕೈಗೊಳ್ಳದಿದ್ದಲ್ಲಿ ಕುಶಾಲನಗರ ಪೊಲೀಸ್ ಠಾಣೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸುವುದಾಗಿ ಹೇಳಿದರು.

ನೂತನ ತಾಲೂಕು ಘೋಷಣೆ ಸಂದರ್ಭ ಪೊಲೀಸ್ ಅಧಿಕಾರಿಗಳು ಬಿಜೆಪಿ ಬೆಂಬಲಿಗರAತೆ ವರ್ತಿಸಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಪಕ್ಷದ ಮೂಲಕ ಹೋರಾಟ ನಡೆಸುವುದಾಗಿ ವಿ.ಪಿ. ಶಶಿಧರ್ ಹೇಳಿದರು. ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹೆಚ್ ಎಸ್ ಅಶೋಕ್, ಕುಡಾ ಮಾಜಿ ಅಧ್ಯಕ್ಷ ಮಂಜುನಾಥ್ ಗುಂಡೂರಾವ್, ಪಟ್ಟಣ ಪಂಚಾಯಿತಿ ಸದಸ್ಯರಾದ ವಿ.ಎಸ್. ಆನಂದ್ ಕುಮಾರ್, ಪ್ರಮೋದ್ ಮುತ್ತಪ್ಪ, ಎಂ.ಕೆ. ದಿನೇಶ್, ಆರ್‌ಎಂಸಿ ಅಧ್ಯಕ್ಷ ರಮೇಶ್, ನಿರ್ದೇಶಕ ಭೀಮಯ್ಯ, ಹೆಬ್ಬಾಲೆ ಗ್ರಾ.ಪಂ. ಅಧ್ಯಕ್ಷ ಮಂಜುನಾಥ್, ಎಂ.ಎಸ್. ರಾಜೇಶ್, ರಾಜೀವ್, ಜೋಸೆಫ್ ವಿಕ್ಟರ್ ಸೋನ್ಸ್ ಮತ್ತಿತರರು ಇದ್ದರು.