ಮಡಿಕೇರಿ, ಜು. ೧೬: ಜಿಲ್ಲೆಯಲ್ಲಿ ತೀವ್ರ ಮತ್ತು ಸಾಧಾರಣ ಅಪೌಷ್ಠಿಕ ಮಕ್ಕಳ ಸುಧಾರಣೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ತೀವ್ರ ಅಪೌಷ್ಠಿಕ ೨೫ ಮಕ್ಕಳು ಹಾಗೂ ಸಾಧಾರಣ ಅಪೌಷ್ಠಿಕ ಮಕ್ಕಳು ೨೯೫ ಇದ್ದು, ಈ ಸಂಬAಧ ಮಕ್ಕಳ ಅಪೌಷ್ಠಿಕತೆ ಸುಧಾರಣೆ ಮಾಡುವಲ್ಲಿ ತುರ್ತು ಕ್ರಮವಹಿಸಬೇಕು ಎಂದು ಅವರು ಸೂಚಿಸಿದರು.

ಸರ್ಕಾರದ ಮಾರ್ಗಸೂಚಿಯಂತೆ ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಬೇಕು. ಪ್ರತೀ ತಿಂಗಳು ಅಪೌಷ್ಠಿಕ ಮಕ್ಕಳಿಗೆ ಪೌಷ್ಠಿಕ ಆಹಾರ ಪೂರೈಸಬೇಕು. ಜಿಲ್ಲೆಯಲ್ಲಿ ಮಕ್ಕಳ ಅಪೌಷ್ಠಿಕತೆ ಹೋಗಲಾಡಿಸಲು ಹೆಚ್ಚಿನ ಶ್ರಮವಹಿಸಬೇಕು ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿನ ಅಂಗನವಾಡಿ ಕೇಂದ್ರಗಳಿಗೆ ಸಂಬAಧಿಸಿದAತೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಅವರು ಎಲ್ಲಾ ಕಡೆಗಳಲ್ಲಿ ಸ್ವಂತ ಕಟ್ಟಡ ಇರಬೇಕು. ನಿವೇಶನ ಬೇಕಿದ್ದಲ್ಲಿ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಈ ಬಗ್ಗೆ ಮಾಹಿತಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಅರವಿಂದ ಬಾಬು ಅವರು ಸಮಗ್ರ ಶಿಶು ಅಭಿವೃದ್ಧಿ ಸೇವಾ ಯೋಜನೆಯಡಿ ೬ ತಿಂಗಳಿAದ ೬ ವರ್ಷದೊಳಗಿನ ಮಕ್ಕಳಿಗೆ ಪೌಷ್ಠಿಕ ಆಹಾರ ವಿತರಿಸಲಾಗುತ್ತದೆ. ಗರ್ಭಿಣಿ ಮತ್ತು ಬಾಣಂತಿಯರಿಗೆ ಪೂರಕ ಪೌಷ್ಠಿಕ ಆಹಾರ ಪೂರೈಸಲಾಗುತ್ತದೆ. ಮಕ್ಕಳು ಮತ್ತು ತಾಯಂದಿರಿಗೆ ರೋಗ ನಿರೋಧಕ ಚುಚ್ಚುಮದ್ದು ನೀಡಲಾಗುತ್ತದೆ. ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಕೈಗೊಳ್ಳಲಾಗುತ್ತದೆ. ೩ ರಿಂದ ೬ ವರ್ಷದೊಳಗಿನ ಮಕ್ಕಳಿಗೆ ಶಾಲಾ ಪೂರ್ವ ಚಟುವಟಿಕೆ ನಡೆಸಲಾಗುತ್ತದೆ ಎಂದು ಅವರು ವಿವರಿಸಿದರು.

೬ ತಿಂಗಳಿAದ ೬ ವರ್ಷದೊಳಗಿನ ಮಕ್ಕಳು, ಗರ್ಭಿಣಿಯರು, ಬಾಣಂತಿಯರು ಮತ್ತು ೧೧ ರಿಂದ ೧೪ ವರ್ಷದೊಳಗಿನ ಶಾಲೆಯಿಂದ ಹೊರಗುಳಿದ ಕಿಶೋರಿಯರಿಗೆ ಪೂರಕ ಪೌಷ್ಠಿಕ ಆಹಾರ ವಿತರಿಸಲಾಗುತ್ತದೆ. ಕೋವಿಡ್-೧೯ ಸಂದರ್ಭದಲ್ಲಿ ಇವರಿಗೆ ಪೌಷ್ಠಿಕ ಆಹಾರವನ್ನು ಮನೆಗೆ ತಲುಪಿಸಲಾಗುತ್ತಿದೆ ಎಂದರು.

ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ೬ ತಿಂಗಳಿನಿAದ ೩ ವರ್ಷದೊಳಗಿನ ೧೫,೯೫೯ ಮಕ್ಕಳು ಹಾಗೆಯೇ ೩ ರಿಂದ ೬ ವರ್ಷದೊಳಗಿನ ೧೪,೪೫೯ ಮಕ್ಕಳು ಇದ್ದಾರೆ. ಹಾಗೆಯೇ ೩,೪೨೨ ಗರ್ಭಿಣಿಯರು, ೩,೬೩೬ ಬಾಣಂತಿಯರು, ೧೧ ರಿಂದ ೧೪ ವರ್ಷದೊಳಗಿನ ಶಾಲೆಯಿಂದ ಹೊರಗುಳಿದ ೯ ಕಿಶೋರಿಯರಿಗೆ ಪೂರಕ ಪೌಷ್ಠಿಕ ಆಹಾರ ತಲುಪಿಸಲಾಗುತ್ತಿದೆ. ಪೂರಕ ಪೌಷ್ಠಿಕ ಆಹಾರ ವಿತರಣೆಯಲ್ಲಿ ಶೇ. ೯೩ ರಷ್ಟು ಸಾಧನೆ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಅರವಿಂದ ಬಾಬು ವಿವರಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಕಾರದೊಂದಿಗೆ ಗರ್ಭಿಣಿ ಮತ್ತು ಬಾಣಂತಿಯರ ಆರೋಗ್ಯ ತಪಾಸಣೆ. ವಿಟಮಿನ್ ಎ ಮಾತ್ರೆಗಳ ಪೂರೈಕೆ ಮತ್ತು ಗ್ರಾಮೀಣ ಆರೋಗ್ಯ ನೈರ್ಮಲ್ಯ ಸಮಿತಿ ಸಭೆ ನಡೆಸಲಾಗುತ್ತದೆ ಎಂದು ಅವರು ತಿಳಿಸಿದರು.

ಆರ್‌ಸಿಹೆಚ್ ಅಧಿಕಾರಿ ಡಾ. ಗೋಪಿನಾಥ್ ಅವರು ಅಪೌಷ್ಠಿಕ ಮಕ್ಕಳಿಗೆ ಹೆಚ್ಚಿನ ಆರೋಗ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಸ್ಪತ್ರೆಯಲ್ಲಿ ೧೦ ಹಾಸಿಗೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ೫ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ. ಸಮುದಾಯ ಆರೋಗ್ಯ ಕೇಂದ್ರದಲ್ಲಿಯೂ ಮಕ್ಕಳ ತಜ್ಞ ವೈದ್ಯರು ಇದ್ದಲ್ಲಿ ಅಲ್ಲಿಯೂ ಸಹ ಪ್ರತ್ಯೇಕ ವ್ಯವಸ್ಥೆ ಮಾಡಲು ಅವಕಾಶವಿದೆ. ಸದ್ಯ ಕೋವಿಡ್-೧೯ ಇರುವುದರಿಂದ ಯಾವುದೇ ಮಕ್ಕಳು ದಾಖಲಾಗುತ್ತಿಲ್ಲ ಎಂದು ಅವರು ಹೇಳಿದರು. ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ನಾಗರಾಜು ಅವರು ಅಂಗನವಾಡಿ ಕಟ್ಟಡಕ್ಕೆ ಸಂಬAಧಿಸಿದAತೆ ಮಾಹಿತಿ ನೀಡಿದರು. ಸಖಿ ಒನ್ ಸ್ಟಾಪ್ ಸೆಂಟರ್‌ನಡಿ ವೈದ್ಯಕೀಯ ನೆರವು ಹಾಗೂ ಸಮಾಲೋಚನೆ, ಪೊಲೀಸ್ ನೆರವು, ಆಪ್ತ ಸಮಾಲೋಚನೆ, ಕಾನೂನು ಸಲಹೆ ಹಾಗೂ ಸಮಾಲೋಚನೆ ಮತ್ತು ತಾತ್ಕಾಲಿಕ ವಸತಿ ಕಲ್ಪಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ತಿಳಿಸಿದರು.

ಈ ಸಂದರ್ಭ ಮಧ್ಯ ಪ್ರವೇಶಿಸಿ ಮಾತನಾಡಿದ ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಕೆ.ಡಿ. ದಯಾನಂದ ಅವರು ಮಕ್ಕಳು ಮತ್ತು ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವಂತಾಗಬೇಕು ಎಂದು ಸಲಹೆ ಮಾಡಿದರು.

ಈ ಸಂದರ್ಭ ಮಾತನಾಡಿದ ವಕೀಲೆ ಮೀನಾ ಕುಮಾರಿ ಅವರು, ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುವ ದೌರ್ಜನ್ಯವನ್ನು ತಡೆಯಬೇಕು. ಆ ನಿಟ್ಟಿನಲ್ಲಿ ಇನ್ನಷ್ಟು ಜಾಗೃತಿ ಮೂಡಿಸಬೇಕಿದೆ ಎಂದು ಅವರು ಹೇಳಿದರು.

ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು, ವಿಶೇಷಚೇತನರು ಹಾಗೂ ಹಿರಿಯ ನಾಗರಿಕರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸಬೇಕು. ಜೊತೆಗೆ ಕಡ್ಡಾಯವಾಗಿ ಗುರುತಿನ ಚೀಟಿ ನೀಡುವಂತೆ ಅವರು ಸೂಚಿಸಿದರು.

ಸಿಡಿಪಿಒಗಳಾದ ಅಣ್ಣಯ್ಯ, ರಾಜೇಶ್, ಆಹಾರ ಸುರಕ್ಷತಾ ಅಧಿಕಾರಿ ಡಾ. ಅನಿಲ್, ಜಿ.ಪಂ. ಯೋಜನಾ ನಿರ್ದೇಶಕ ಶ್ರೀಕಂಠಮೂರ್ತಿ, ಕಾರ್ಮಿಕ ಇಲಾಖಾ ಅಧಿಕಾರಿ ಅನಿಲ್ ಬಗಟಿ, ಪೌರಾಯುಕ್ತ ರಾಮದಾಸ್, ಇತರರು ಇದ್ದರು.