ಸೋಮವಾರಪೇಟೆ, ಜು. ೧೬: ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಹಾಗೂ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಚನ್ನಬಸಪ್ಪ ಸಭಾಂಗಣದಲ್ಲಿ ವಿಶ್ವ ಜನಸಂಖ್ಯಾ ದಿನವನ್ನು ಆಚರಿಸಲಾಯಿತು.
ಜೆಎಂಎಫ್‌ಸಿಯ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಗೋಕುಲ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ದೇಶದಲ್ಲಿ ಜನಸಂಖ್ಯಾ ಸ್ಫೋಟಕ್ಕೆ ಕಾರಣಗಳು, ಇದರಿಂದಾಗುತ್ತಿರುವ ಸಮಸ್ಯೆಗಳು, ಜನಸಂಖ್ಯಾ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಸಿವಿಲ್ ನ್ಯಾಯಾಧೀಶೆ ಪ್ರತಿಭಾ ಮಾತನಾಡಿ, ಕೋವಿಡ್-೧೯ರ ಸಾಂಕ್ರಾಮಿಕ ರೋಗ ಹರಡದಂತೆÀ ಪ್ರತಿಯೊಬ್ಬರೂ ಜಾಗೃತಿ ವಹಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಅಂತರ ಕಾಯ್ದುಕೊಳ್ಳಬೇಕು. ತಪ್ಪದೆ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ಕೆ.ಎಸ್. ಪದ್ಮನಾಭ, ಆಯುಷ್ ಇಲಾಖೆಯ ವೈದ್ಯೆ ಶ್ವೇತ ಸೇರಿದಂತೆ ಇತರರು ಉಪಸ್ಥಿತರಿದ್ದರು.