ವೀರಾಜಪೇಟೆ, ಆ. ೧೧: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗಳಿಂದಾಗಿ ಗ್ರಾಮೀಣ ಭಾಗದ ಮಹಿಳೆಯು ಆರ್ಥಿಕವಾಗಿ ಸದೃಢವಾಗಿ ಸ್ವಾವಲಂಬಿ ಬದುಕು ಸಾಗಿಸಲು ಸಾಧ್ಯವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕೊಡಗು ಜಿಲ್ಲಾ ಯೋಜನಾ ನಿರ್ದೇಶಕ ಡಾ.ಯೋಗೇಶ್ ಅಭಿಪ್ರಾಯ ವ್ಯಕ್ತಪಡಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಆಶ್ರಯದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ವೀರಾಜಪೇಟೆ ಯೋಜನಾ ಕಚೇರಿಯಲ್ಲಿ ನಡೆದ ವೀರಾಜಪೇಟೆ ತಾಲೂಕಿನ ಜ್ಞಾನ ವಿಕಾಸ ಕೇಂದ್ರದ ಸೇವಾ ಪ್ರತಿನಿಧಿ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಪ್ರತಿ ಮಹಿಳೆಯು ಸಂಸ್ಥೆಯ ವತಿಯಿಂದ ನೀಡುವ ಯೋಜನೆಗಳನ್ನು ಅನುಷ್ಠಾನಗೊಳಿಸಿ ಅಭಿವೃದ್ಧಿಯತ್ತ ಸಾಗುವಂತಾಗಬೇಕು, ಜನರಿಗೆ ಆರ್ಥಿಕ ಸೌಲಭ್ಯವನ್ನು ಕಲ್ಪಿಸಿಕೊಡುವ ಉದ್ದೇಶ ನಮ್ಮದಾಗಿದೆ. ಅಲ್ಲದೆ ಜ್ಞಾನವಿಕಾಸ ಕಾರ್ಯಕ್ರಮದ ಮಹತ್ವ, ಕಾರ್ಯಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನದ ಬಗ್ಗೆ ಮಾಹಿತಿ ನೀಡಿದರು.
ವೀರಾಜಪೇಟೆ ತಾಲೂಕು ಯೋಜನಾಧಿಕಾರಿ ಪದ್ಮಯ್ಯ ಮಾತನಾಡಿ, ಪ್ರಸ್ತುತ ಸಮಾಜದಲ್ಲಿ ಸ್ವಸಹಾಯ ಸಂಘಗಳಿಗೆ ನೀಡುವ ಯೋಜನೆಗಳಿಂದ ಮಹಿಳೆಯು ಆರ್ಥಿಕವಾಗಿ ಸದೃಢವಾಗಿ ಮುಂದುವರೆಯಲು ಸಾದ್ಯವಾಗಿದೆ ಇದನ್ನು ಪ್ರತಿಯೊಬ್ಬರೂ ಕಾರ್ಯರೂಪಕ್ಕೆ ತರಲು ಪ್ರಯತ್ನಿಸಬೇಕು ಎಂದು ಹೇಳಿ ಸೇವಾ ಪ್ರತಿನಿಧಿಗಳಿಗೆ ಕ್ರಿಯಾಯೋಜನೆ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಯೋಜನೆಯ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.