ನಾಪೋಕ್ಲು, ಆ. ೧೦: ಗ್ರಾಮ ಪಂಚಾಯಿತಿಯ ಟಾಸ್ಕ್ಫೋರ್ಸ್ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕೆÀ್ಷ ಎಚ್.ಎಸ್. ಪಾರ್ವತಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋವಿಡ್ ಪರೀಕ್ಷೆಯನ್ನು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಒಬ್ಬ ಪೊಲೀಸ್ ಸಿಬ್ಬಂದಿ ಮನೆ ಮನೆ ತೆರಳಿ ಪರೀಕ್ಷೆ ಮಾಡುವಂತೆ ತೀರ್ಮಾನ ಕೈಗೊಂಡು ಯಾವುದೇ ಲಕ್ಷಣ ಕಂಡು ಬಂದರೆ ಅವರನ್ನು ೧೪ ದಿನಗಳ ಕಾಲ ಕ್ವಾರಂಟೈನ್‌ಗೆ ಒಳಪಡಿಸುವಂತೆ ತೀರ್ಮಾನ ಕೈಗೊಳ್ಳಲಾಯಿತು. ನಗರಕ್ಕೆ ಬರುವ ಪ್ರತಿಯೊಬ್ಬರೂ ಮಾಸ್ಕ್ ಕಡ್ಡಾಯವಾಗಿ ಧರಿಸಿ ಅಂತರವನ್ನು ಕಾಯ್ದುಕೊಳ್ಳಬೇಕು, ತಪ್ಪಿದರೆ ಅವರ ಮೇಲೆ ಕ್ರಮಕೈಗೊಳ್ಳುವಂತೆ ತಿಳಿಸಲಾಯಿತು. ಅದರಂತೆ ಕಲ್ಲುಮೊಟ್ಟೆಯಲ್ಲಿ ಅಂಗನವಾಡಿ ಕೇಂದ್ರದ ಕಟ್ಟಡ ನಿರ್ಮಿಸಲು ಅರಣ್ಯ ಇಲಾಖೆಯ ಅನುಮತಿಯನ್ನು ಪಡೆಯುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು.

ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶೇಖರ್ ಮಾತನಾಡಿ, ಈಗಾಗಲೇ ಜಿಲ್ಲೆಯಲ್ಲಿ ಕೋವಿಡ್ ಅಲೆ ಜಾಸ್ತಿಯಾಗಿದ್ದು, ಪ್ರತಿಯೊಬ್ಬರೂ ಮಾಸ್ಕ್ ಧರಿಸಿ ಅಂತರ ಕಾಪಾಡುವಂತೆ ಕೋರಿದರು. ಟಾಸ್ಕ್ಫೋರ್ಸ್ ಸದಸ್ಯರು ಈ ಬಗ್ಗೆ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳಬೇಕೆಂದರು. ಈ ಸಂದರ್ಭ ಅಧಿಕಾರಿಗಳಾದ ಹೇಮಂತ್, ಕಂದಾಯ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೊಂದಕ್ಕಿ, ಸಿಬ್ಬಂದಿ ವರ್ಗದವರು ಇದ್ದರು.